ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಒಕ್ಕೊರಲ ನಿರ್ಣಯ
ದುಬೈ, ನ. 24: ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವಂತೆ ರಾಜ್ಯ ಸರಕಾರದ ಮೂಲಕ ಕೇಂದ್ರ ಸರಕಾರವನ್ನು ಒತ್ತಾಯಿಸಲು ಒಕ್ಕೊರಲ ನಿರ್ಣಯ ಮಾಡುವುದರೊಂದಿಗೆ ಎರಡು ದಿನಗಳ ವಿಶ್ವ ತುಳು ಸಮ್ಮೇಳನ ಶನಿವಾರ ಸಮಾಪನಗೊಂಡಿತು.
ಅಖಿಲ ಭಾರತ ತುಳು ಒಕ್ಕೂಟ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಜಂಟಿ ಆಶ್ರಯದಲ್ಲಿ ದುಬೈಯ ಅಲ್ ನಾಸರ್ ಲೀಸರ್ ಲ್ಯಾಂಡ್ ಒಳಾಂಗಣ ಕ್ರೀಡಾಂಗಣದ ರಾಣಿ ಅಬ್ಬಕ್ಕ ಚಾವಡಿಯಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ಸಮ್ಮೇಳನದಲ್ಲಿ ಉಪಸ್ಥಿತರಿದ್ದ ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಸಮಾರೋಪ ಸಮಾರಂಭವನ್ನು ಉಡುಪಿ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಉದ್ಘಾಟಿಸಿದರು.
ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ, ಮಾಣಿಲ ಶ್ರೀಧಾಮ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಅನಿವಾಸಿ ಭಾರತೀಯ ಉದ್ಯಮಿ ಡಾ.ಬಿ.ಆರ್.ಶೆಟ್ಟಿ, ಬಾಲಿವುಡ್‌ನಟ ಸುನೀಲ್ ಶೆಟ್ಟಿ, ಸಾಹಿತಿ ಡಾ.ಸುನೀತಾ ಶೆಟ್ಟಿ, ಸಂಗೀತ ನಿರ್ದೇಶಕ ಗುರುಕಿರಣ್, ಕ್ರೈಸ್ತ ಧರ್ಮಗುರು ವಂ.ಎಬ್ನೆಝರ್ ಜತ್ತನ್ನ, ‘ವಾರ್ತಾಭಾರತಿ’ಯ ಪ್ರಧಾನ ಸಂಪಾದಕ ಅಬ್ದುಸ್ಸಲಾಂ ಪುತ್ತಿಗೆ, ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಧರ್ಮಪಾಲ ದೇವಾಡಿಗ, ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಎ.ಸಿ.ಭಂಡಾರಿ, ಶೋಧನ್ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.