ನಿವೇಶನ ಹಂಚಿಕೆಯಲ್ಲಿ ಅಕ್ರಮ: ಬಿಜೆಪಿ ಶಾಸಕ ವಿಶ್ವನಾಥ್ ವಿರುದ್ಧ ಎಸಿಬಿಗೆ ದೂರು
Update: 2018-11-28 20:37 IST
ಬೆಂಗಳೂರು, ನ.28: ನಿವೇಶನ ಹಂಚಿಕೆಯಲ್ಲಿ ಅಕ್ರಮವೆಸಗಲಾಗಿದೆ ಎಂದು ಆರೋಪಿಸಿ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಲಾಗಿದೆ.
ಬುಧವಾರ ನಗರದ ರೇಸ್‌ಕೋರ್ಸ್ ರಸ್ತೆಯ ಎಸಿಬಿಗೆ ಕೇಂದ್ರ ಕಚೇರಿಯಲ್ಲಿ ಕರ್ನಾಟಕ ಕಾರ್ಮಿಕ ವೇದಿಕೆ ಅಧ್ಯಕ್ಷ ನಾಗೇಶ್ ದೂರು ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ರಾಜೀವ್ ಗಾಂಧಿ ಆಶ್ರಯ ಯೋಜನೆ ಅಡಿ ನಿವೇಶನ ಹಂಚಿಕೆಯಲ್ಲಿ ಅಕ್ರಮವೆಸಗಿದ್ದಾರೆ ಎಂದು ನಾಗೇಶ್ ದೂರಿನಲ್ಲಿ ಆರೋಪಿಸಿದ್ದಾರೆ.
ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಹೋಬಳಿಯಲ್ಲಿರುವ ಚಿಕ್ಕಗೊಲ್ಲರಹಟ್ಟಿಯಲ್ಲಿ ಬಡವರಿಗೆ ದೊರೆಯಬೇಕಾದ ಬರೋಬ್ಬರಿ 323 ನಿವೇಶನಗಳನ್ನು ಶ್ರೀಮಂತರಿಗೆ ಹಂಚಿಕೆ ಮಾಡಿದ್ದಾರೆ. ಈ ಸಂಬಂಧ ಶಾಸಕ ವಿಶ್ವನಾಥ್ ಜೊತೆಗೆ ಗಂಗಾಧರ್, ಉಮೇಶ್ ಹಾಗೂ ಗಂಗಲಕ್ಷ್ಮೀ ಎಂಬುವವರ ವಿರುದ್ಧವೂ ದೂರು ದಾಖಲಿಸಲಾಗಿದೆ ಎಂದು ನಾಗೇಶ್ ಸುದ್ದಿಗಾರರಿಗೆ ತಿಳಿಸಿದ್ದಾರೆ