ಮಾದಕ ದ್ರವ್ಯ ಜಾಲ ಮಟ್ಟಹಾಕಲು ಪೊಲೀಸ್ ಇಲಾಖೆಗೆ ಸಂಪೂರ್ಣ ಸಹಕಾರ: ಶಾಸಕ ಕಾಮತ್
ಮಂಗಳೂರು, ನ.28: ಬೆಂಗ್ರೆಯಲ್ಲಿ ಇತ್ತೀಚೆಗೆ ನಡೆದ ಸಾಮೂಹಿಕ ಅತ್ಯಾಚಾರದ ಘಟನೆ ಖಂಡಿಸಿದ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್, ಮಾದಕ ದ್ರವ್ಯ ಜಾಲ ಮಟ್ಟಹಾಕಲು ಪೊಲೀಸ್ ಇಲಾಖೆಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಮಂಗಳೂರಿನ ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ತಪ್ಪಿತಸ್ಥರನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿರುವುದಾಗಿದ್ದೇನೆ ಎಂದು ತಿಳಿಸಿದರು.
ಇಂತಹ ಕೆಟ್ಟ ಘಟನೆಗಳಿಗೆ ಯುವಕರು ಗಾಂಜಾ, ಅಫೀಮು, ಚರಸ್‌ನಂತಹ ಮಾದಕ ದ್ರವ್ಯ ಸೇವಿಸುತ್ತಿರುವುದೇ ಕಾರಣ. ಮಾದಕ ದ್ರವ್ಯ ಜಾಲವನ್ನು ಸಂಪೂರ್ಣವಾಗಿ ಕೊನೆಗೊಳಿಸದಿದ್ದರೆ ಇಂತಹ ಘಟನೆಗಳು ಮರುಕಳಿಸುತ್ತಿರುತ್ತವೆ. ಪೊಲೀಸ್ ಇಲಾಖೆ ಮಾದಕ ದ್ರವ್ಯ ಜಾಲವನ್ನು ಮಟ್ಟ ಹಾಕಲು ತೆಗೆದುಕೊಳ್ಳುವ ಯಾವುದೇ ಕ್ರಮಕ್ಕೂ ಶಾಸಕನಾಗಿ ಮುಕ್ತವಾಗಿ ಬೆಂಬಲಿಸುವುದಾಗಿ ಹೇಳಿದರು.
ಬೆಂಗ್ರೆ ಪ್ರದೇಶದಲ್ಲಿ ಪೊಲೀಸ್ ಹೊರ ಠಾಣೆಯ ಅಗತ್ಯ ಇದೆ ಎನ್ನುವುದರ ಬಗ್ಗೆ ಈಗಾಗಲೇ ಮಂಗಳೂರು ಪೊಲೀಸ್ ಕಮೀಷನರ್ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಶೀಘ್ರದಲ್ಲಿ ಆ ಬಗ್ಗೆ ಸೂಕ್ತ ವ್ಯವಸ್ಥೆ ಆಗಬೇಕಿದೆ. ಒಂದು ವೇಳೆ ಮುಂದಿನ ದಿನಗಳಲ್ಲಿ ಸುಸಜ್ಜಿತ ಪೊಲೀಸ್ ಠಾಣೆಯನ್ನು ನಿರ್ಮಿ ಸಲು ಉನ್ನತ ಪೊಲೀಸ್ ಅಧಿಕಾರಿಗಳು ಪ್ರಸ್ತಾವ ನೀಡಿದಲ್ಲಿ ರಾಜ್ಯಮಟ್ಟದಲ್ಲಿ ಗೃಹ ಇಲಾಖೆ ಮತ್ತು ಅಧಿಕಾರಿಗಳ ಮಟ್ಟದಲ್ಲಿ ಮಾತುಕತೆ ನಡೆಸಿ ಬೆಂಗ್ರೆ ಪ್ರದೇಶದಲ್ಲಿ ಪೂರ್ಣ ಪ್ರಮಾಣದ ಪೊಲೀಸ್ ಠಾಣೆಯ ನಿರ್ಮಾಣಕ್ಕೆ ಶ್ರಮಿಸುವುದಾಗಿ ಶಾಸಕ ಕಾಮತ್ ಪ್ರಕಟನೆಯಲ್ಲಿ ತಿಳಿಸಿದರು.