ತೋಟ ಬೆಂಗ್ರೆ ಪ್ರಕರಣ: ಎಸ್‌ಡಿಎಂ ಕಾನೂನು ವಿದ್ಯಾರ್ಥಿಗಳಿಂದ ಪ್ರತಿಭಟನೆ
ಮಂಗಳೂರು, ನ.30: ತೋಟಬೆಂಗ್ರೆಯಲ್ಲಿ ಇತ್ತೀಚೆಗೆ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರವನ್ನು ಖಂಡಿಸಿ ಎಸ್‌ಡಿಎಂ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸಿದರು.
ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ವಿದ್ಯಾರ್ಥಿ ನಾಯಕ ಜಿತಿನ್, ತಡವಾಗಿ ಬೆಳಕಿಗೆ ಬಂದ ಪ್ರಕರಣವನ್ನು ಬೇಧಿಸಿದ ಪೊಲೀಸರು ಈಗಾಗಲೇ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿರುವುದು ಸ್ವಾಗತಾರ್ಹ. ಇದರ ಜತೆ ಪ್ರಕರಣದಲ್ಲಿ ಭಾಗಿಯಾದ ಎಲ್ಲಾ ಆರೋಪಿ ಗಳನ್ನು ಶೀಘ್ರವಾಗಿ ಬಂಧಿಸಬೇಕು ಎಂದು ಆಗ್ರಹಿಸಿದರು.
ತೋಟ ಬೆಂಗ್ರೆಯಂತಹ ಪ್ರದೇಶಗಳಲ್ಲಿ ಪೊಲೀಸರು ಭದ್ರತೆಯನ್ನು ಒದಗಿಸುವ ಮೂಲಕ ಪ್ರವಾಸಿಗರಿಗೆ, ಅಲ್ಲಿಗೆ ವಿಹಾರಕ್ಕೆ ಬರುವವರಿಗೆ ತೊಂದರೆ ಆಗದಂತೆ ಖಾತರಿಪಡಿಸಬೇಕು ಎಂದು ಹೇಳಿದರು. ವಿದ್ಯಾರ್ಥಿನಿ ಮುಫೀದಾ ಮಾತನಾಡಿ, ಈ ಹೀನಾಯ ಕೃತ್ಯವನ್ನು ಖಂಡಿಸುತ್ತಿದ್ದು, ಸರಕರಾ ಮತ್ತು ಪೊಲೀಸರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮಹಿಳೆಯರು ಇಂದು ಸುರಕ್ಷತೆಯ ಬಗ್ಗೆ ಆತಂಕ ಪಡುವಂತಾಗಿದೆ. ಮನೆಯಿಂದ ಹೊರ ಹೋದವರು ಸುರಕ್ಷಿತವಾಗಿ ಮನೆ ತಲುಪುವ ವಿಶ್ವಾಸ ಇಲ್ಲವಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯ ನೀಡುವ ಮೂಲಕ ಇಂತಹ ಕೃತ್ಯ ಎಸಗಲು ಮುಂದಾಗುವವರಿಗೆ ಎಚ್ಚರಿಕೆ ನೀಡಬೇಕು ಎಂದು ಅವರು ಆಗ್ರಹಿಸಿದು. ಬಳಿಕ ವಿದ್ಯಾರ್ಥಿಗಳ ತಂಡ ಪೊಲೀಸ್ ಆಯುಕ್ತರಿಗೆ ಮನವಿಯನ್ನು ಸಲ್ಲಿಸಿತು.
ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳನ್ನು ಶೀಘ್ರ ಬಂಧಿಸಬೇಕು. ತೋಟಬೆಂಗ್ರೆ ಪ್ರದೇಶದಲ್ಲಿ ಪ್ರವಾಸಿಗರಿಗೆ ವಿಶೇಷ ಪೊಲೀಸ್ ಭದ್ರತೆ ಒದಗಿಸಬೇಕು. ಆ ಪ್ರದೇಶದಲ್ಲಿ ಮಾದಕ ವ್ಯಸನ ಜಾಲ ಸಕ್ರಿಯವಾಗಿದ್ದು, ಅದರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸೂಕ್ಷ್ಮ ಪ್ರದೇಶದಲ್ಲಿ ಸಿಸಿಟಿವಿ ಕ್ಯಾಮರಾ ಆಳವಡಿಸಬೇಕು ಎಂಬ ಬೇಡಿಕೆಗನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ.