ಸಮನ್ವಯ ಸಮಿತಿಯತ್ತ ಸಚಿವ ಸ್ಥಾನ ಆಕಾಂಕ್ಷಿಗಳ ಚಿತ್ತ

Update: 2018-11-30 16:54 GMT

ಬೆಂಗಳೂರು, ನ.30: ಬೆಳಗಾವಿಯಲ್ಲಿ ಡಿ.10ರಿಂದ ಆರಂಭಗೊಳ್ಳಲಿರುವ ಚಳಿಗಾಲದ ಅಧಿವೇಶನಕ್ಕೆ ಮುಂಚಿತವಾಗಿ ಸಂಪುಟ ವಿಸ್ತರಣೆ ಮಾಡುವಂತೆ ಕಾಂಗ್ರೆಸ್ ಪಕ್ಷದಲ್ಲಿ ಹೆಚ್ಚುತ್ತಿರುವ ಒತ್ತಡದ ಹಿನ್ನೆಲೆಯಲ್ಲಿ ಡಿ.5ರಂದು ಮಾಜಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ಸಭೆ ನಡೆಯಲಿದೆ.

ಸಂಪುಟ ವಿಸ್ತರಣೆ ಸಂಬಂಧ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಈಗಾಗಲೆ ಸಿದ್ದರಾಮಯ್ಯ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದು, ಕಾಂಗ್ರೆಸ್ ಹೈಕಮಾಂಡ್‌ನಿಂದ ಒಪ್ಪಿಗೆ ಪಡೆಯುವ ಸಂಬಂಧ ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್ ಇತ್ತೀಚೆಗಷ್ಟೇ ಹೊಸದಿಲ್ಲಿಗೆ ತೆರಳಿ ಮಾತುಕತೆ ನಡೆಸಿ ಹಿಂದಿರುಗಿದ್ದಾರೆ.

ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಜೊತೆಯೂ ಮುಖ್ಯಮಂತ್ರಿ ಕುಮಾರಸ್ವಾಮಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಸಚಿವ ಸಂಪುಟ ವಿಸ್ತರಣೆಗೆ ನಾವು ಸಿದ್ಧವಾಗಿದ್ದೇವೆ. ಆದರೆ, ಸಮಸ್ಯೆ ಇರುವುದು ಕಾಂಗ್ರೆಸ್ ಪಕ್ಷದಲ್ಲಿ. ಆಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಸಚಿವ ಸ್ಥಾನ ಸಿಗದಿದ್ದರೆ ಪಕ್ಷ ತೊರೆಯಲು ಸಿದ್ಧವಾಗಿದ್ದಾರೆ ಎಂಬ ಮಾಹಿತಿಯನ್ನು ಕುಮಾರಸ್ವಾಮಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಸಚಿವ ಸ್ಥಾನ ವಂಚಿತರು ಒಂದು ವೇಳೆ ಪಕ್ಷ ತೊರೆದರೆ, ಉಂಟಾಗಬಹುದಾದ ಸಮಸ್ಯೆಗಳನ್ನು ನಿಭಾಯಿಸುವುದು ನಿಮ್ಮ ಹೊಣೆಗಾರಿಕೆಯಾಗಿರಲಿದೆ. ಜೆಡಿಎಸ್ ಪಕ್ಷದಲ್ಲಿ ಯಾವುದೇ ಸಮಸ್ಯೆಯಿಲ್ಲ. ನಮ್ಮಿಂದ ಸಮ್ಮಿಶ್ರ ಸರಕಾರಕ್ಕೆ ಯಾವುದೇ ಧಕ್ಕೆಯಾಗುವುದಿಲ್ಲ ಎಂದು ಕುಮಾರಸ್ವಾಮಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಸಚಿವ ಸಂಪುಟ ವಿಸ್ತರಣೆ ಕುರಿತು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ರನ್ನು ಹೊಸದಿಲ್ಲಿಗೆ ಕರೆಸಿಕೊಂಡು ಚರ್ಚಿಸುವುದಾಗಿ ರಾಹುಲ್‌ ಗಾಂಧಿ, ಮುಖ್ಯಮಂತ್ರಿಗೆ ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ಅಲ್ಲದೆ, ಡಿ.5ರಂದು ನಡೆಯಲಿರುವ ಸಮನ್ವಯ ಸಮಿತಿ ಸಭೆಯಲ್ಲೂ ಮಹತ್ವದ ಚರ್ಚೆ ನಡೆಯಲಿದೆ. ಸಚಿವ ಸಂಪುಟ ವಿಸ್ತರಣೆ ಸಾಧ್ಯವಾಗದೆ ಇದ್ದರೆ, ಆದಷ್ಟು ಬೇಗ ನಿಗಮ, ಮಂಡಳಿಗಳ ನೇಮಕಾತಿಯನ್ನು ಪೂರ್ಣಗೊಳಿಸಿ, ಸ್ವಲ್ಪಮಟ್ಟಿಗೆ ಒತ್ತಡವನ್ನು ನಿವಾರಿಸಬಹುದಾಗಿದೆ ಎಂದು ಕೆಲವು ಹಿರಿಯ ಮುಖಂಡರು ನೀಡಿರುವ ಸಲಹೆ ಕುರಿತು ಸಮನ್ವಯ ಸಮಿತಿಯಲ್ಲಿ ಚರ್ಚೆಯಾಗಲಿದೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News