ರಾಷ್ಟ್ರ, ಅಂತರ್‌ರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಿಗೆ ಅಗತ್ಯ ನೆರವು: ಬಿಬಿಎಂಪಿ ಮೇಯರ್ ಗಂಗಾಂಬಿಕೆ

Update: 2018-12-01 13:54 GMT

ಬೆಂಗಳೂರು, ಡಿ.1: ರಾಜ್ಯದಿಂದ ಪ್ರತಿನಿಧಿಸುವ ಅಂತರ್‌ರಾಷ್ಟ್ರೀಯ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಪಟುಗಳಿಗೆ ಬಿಬಿಎಂಪಿ ವತಿಯಿಂದ ಅಗತ್ಯವಾದ ಎಲ್ಲ ನೆರವನ್ನು ನೀಡಲಾಗುವುದು ಎಂದು ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ ತಿಳಿಸಿದ್ದಾರೆ.

ನಗರದ ಮಲ್ಲೇಶ್ವರಂ ಆಟದ ಮೈದಾನದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿದ್ದ ರಾಜ್ಯ ಮಹಾನಗರ ಪಾಲಿಕೆಗಳ ನಡುವೆ ನಡೆಯುತ್ತಿರುವ ಅಂತರ ಪಾಲಿಕೆ ಮಹಿಳಾ ಥ್ರೋಬಾಲ್ ಪಂದ್ಯಾವಳಿಗೆ, ಥ್ರೋಬಾಲ್ ಎಸೆಯುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಮಹಿಳಾ ಕ್ರೀಡಾಪಟುಗಳು ಕ್ರೀಡೆಯಲ್ಲಿ ಹೆಚ್ಚು ಭಾಗವಹಿಸುವಂತೆ ಮನವಿ ಮಾಡಿದರು.

ರಾಜ್ಯದ ಮಹಾನಗರದ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ನೌಕರರು ಒತ್ತಡದ ನಡುವೆ ಸೇವೆ ಸಲ್ಲಿಸುತ್ತಾರೆ. ಇಂತಹ ಕ್ರೀಡಾ ಚಟುವಟಿಕೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ರಾಷ್ಟ್ರ ಹಾಗೂ ರಾಜ್ಯ ಕ್ರೀಡೆಯಲ್ಲಿ ಸಾಧನೆ ಮಾಡಿದ ಕಬಡ್ಡಿಯಲ್ಲಿ ಬೆಳ್ಳಿ ಪದಕ ಪಡೆದ ಉಷಾರಾಣಿ, ಥ್ರೋಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ ಪಡೆದ ಎಚ್.ಜಿ.ಗುಣಶ್ರೀ ಹಾಗೂ ಈಜು ಸ್ಪರ್ಧೆಯಲ್ಲಿ ಚಿನ್ನದ ಪದಕ ವಿಜೇತ ಮೋಹನ್‌ ಕೇತನ ಅವರನ್ನು ಸನ್ಮಾನಿಸಿದರು.

ಥ್ರೋಬಾಲ್ ಪಂದ್ಯಾವಳಿಯಲ್ಲಿ ಬಿಬಿಎಂಪಿ ಅಲ್ಲದೆ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ತುಮಕೂರು, ಮೈಸೂರು, ವಿಜಯಪುರ, ಶಿವಮೊಗ್ಗ, ಬೆಳಗಾವಿ, ಬಳ್ಳಾರಿ, ಮಂಗಳೂರು ಹಾಗೂ ಗುಲ್ಬರ್ಗಾ ಮಹಾನಗರ ಪಾಲಿಕೆಗಳ ಮಹಿಳಾ ಪಾಲಿಕೆ ನೌಕರರು ಕ್ರೀಡೋತ್ಸವದಲ್ಲಿ ಪಾಲ್ಗೊಂಡಿದ್ದರು.

ನೌಕರರ ಸಂಘದ ಅಧ್ಯಕ್ಷ ಅಮೃತ ರಾಜು, ರಾಜ್ಯ ಸರಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಮಂಜೇಗೌಡ ಮತ್ತಿತರರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News