ಸಂಪುಟ ವಿಸ್ತರಣೆಗೆ ಸಂಬಂಧಿಸಿ ಡಿ.5ರಂದು ಸಮನ್ವಯ ಸಮಿತಿ ಸಭೆ: ಸಿದ್ದರಾಮಯ್ಯ

Update: 2018-12-02 06:27 GMT

ಹುಬ್ಬಳ್ಳಿ, ಡಿ.2: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿ ಡಿ.5ರಂದು ಸಮನ್ವಯ ಸಮಿತಿಯ ಸಭೆ ಕರೆಯಲಾಗಿದೆ. ಸಭೆಯಲ್ಲಿ ಸಂಪುಟ ವಿಸ್ತರಣೆಯ ಬಗ್ಗೆ ನಿರ್ಧರಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಅಧಿವೇಶನಕ್ಕೆ ಮುಂಚಿತವಾಗಿ ಸಂಪುಟ ವಿಸ್ತರಣೆ ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದು ತಿಳಿಸಿದರು.

ಸಂಪುಟ ವಿಸ್ತರಣೆ ಬಳಿಕ ಸರಕಾರ ಬೀಳಲಿದೆ ಎಂಬ ಬಿಜೆಪಿ ಮುಖಂಡರಾದ ಈಶ್ವರಪ್ಪರ ಹೇಳಿಕೆಗೆ ಸಂಬಂಧಿಸಿದ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬಿಜೆಪಿಗೆ ಬಹುಮತ ಇಲ್ಲ. ಆದರೂ ಈಶ್ವರಪ್ಪ, ಯಡಿಯೂರಪ್ಪ ಅದ್ಯಾಕೆ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ಅವರ ಕನಸು ನನಗಾಗೊಲ್ಲ. ಈ ಸರಕಾರ ಐದು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಮ್ಮಿಶ್ರ ಸರಕಾರದಲ್ಲಿ ಕಾಂಗ್ರೆಸ್ ಶಾಸಕರನ್ನು ಕಡೆಗಣಿಸಲಾಗಿದೆ ಎಂಬ ಆರೋಪ ಕೇಳಿಬರುತ್ತಿರುವ ಬಗ್ಗೆ ಮಾಧ್ಯಮವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅದೆಲ್ಲ ಸುಳ್ಳು ಸುಳ್ಳು ಎಂದರು.

ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಮತ ಇಲ್ಲ. ಬಿ.ಸಿ.ಪಾಟೀಲ್ ಅವರು ಸಚಿವರಾಗುವ ಇಚ್ಛೆ ವ್ಯಕ್ತಪಡಿಸುತ್ತಿದ್ದಾರೆಯೇ ಹೊರತು ಯಾವುದೇ ಪ್ರತ್ಯೇಕ ಸಭೆ ನಡೆಸಿಲ್ಲ. ರಾಮಲಿಂಗಾ ರೆಡ್ಡಿ ಯಾವುದೇ ಸಭೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News