ಬೆಳಗಾವಿ ಅಧಿವೇಶನ ಬಳಿಕ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ

Update: 2018-12-05 15:35 GMT

ಬೆಂಗಳೂರು, ಡಿ.5: ಬೆಳಗಾವಿಯಲ್ಲಿ ಡಿ.10ರಿಂದ ಆರಂಭಗೊಳ್ಳಲಿರುವ ಚಳಿಗಾಲದ ಅಧಿವೇಶನದ ಬಳಿಕ ರಾಜ್ಯ ಸಚಿವ ಸಂಪುಟವನ್ನು ವಿಸ್ತರಣೆ ಮಾಡಲಾಗುವುದು ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬುಧವಾರ ನಗರದ ಕುಮಾರಕೃಪಾದಲ್ಲಿ ನಡೆದ ಸಮನ್ವಯ ಸಮಿತಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನವು ಡಿ.21ರಂದು ಮುಗಿಯಲಿದ್ದು, ಡಿ.22ರಂದು ಸಂಪುಟ ವಿಸ್ತರಣೆ ಮಾಡಲಾಗುವುದು ಎಂದರು.

ಅಂದೇ ಮೊದಲ ಹಂತದಲ್ಲಿ 30 ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು. ಈ ಪೈಕಿ ಕಾಂಗ್ರೆಸ್‌ನ 20 ಶಾಸಕರು ಹಾಗೂ ಜೆಡಿಎಸ್‌ನ 10 ಶಾಸಕರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಸೋಮವಾರದಿಂದಲೇ ವಿಧಾನಮಂಡಲದ ಅಧಿವೇಶನ ಆರಂಭವಾಗುತ್ತಿದೆ. ಇನ್ನು, ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಜೊತೆ ಸಂಪುಟ ವಿಸ್ತರಣೆ ಸಂಬಂಧ ಮಾತುಕತೆ ನಡೆಸಬೇಕಿದೆ. ಆದುದರಿಂದ, ಡಿ.22ರಂದು ಸಂಪುಟ ವಿಸ್ತರಣೆಗೆ ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು. ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕದ ಜೊತೆಗೆ ಸಂಸದೀಯ ಕಾರ್ಯದರ್ಶಿಗಳನ್ನು ನೇಮಕ ಮಾಡುವ ಕುರಿತು ಇವತ್ತಿನ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ರಾಜ್ಯ ಸರಕಾರ ಸುಗಮವಾಗಿ ಆಡಳಿತ ನಡೆಸುವ ಸಂಬಂಧ ಸಾಕಷ್ಟು ಮಾತುಕತೆ ನಡೆಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಸಂಪುಟದಲ್ಲಿ ಯಾವ ಸ್ಥಾನವನ್ನು ಖಾಲಿ ಇಟ್ಟುಕೊಳ್ಳುವುದಿಲ್ಲ. ನಾವು ಆರು ಸ್ಥಾನಗಳನ್ನು ಭರ್ತಿ ಮಾಡಲಿದ್ದೇವೆ, ಜೆಡಿಎಸ್‌ನವರು ಎರಡು ಸ್ಥಾನಗಳನ್ನು ಭರ್ತಿ ಮಾಡಲಿದ್ದಾರೆ. ವಿಧಾನಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬುದರ ಕುರಿತು ಇನ್ನೆರೆಡು ದಿನಗಳಲ್ಲಿ ತೀರ್ಮಾನ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ಬಿಜೆಪಿಯ ಆಪರೇಷನ್ ಕಮಲಕ್ಕೆ ಯಾರೂ ಬಲಿಯಾಗುವುದಿಲ್ಲ. ಅವರು ಹಗಲುಗನಸು ಕಾಣುತ್ತಿದ್ದಾರೆ. ಒಮ್ಮೆ ಆಪರೇಷನ್ ಕಮಲ ಮಾಡಿ ಗೆದ್ದಿದ್ದಾರೆ. ಅದು ಪದೇ ಪದೇ ಯಶಸ್ವಿಯಾಗುವುದಿಲ್ಲ ಎಂದು ಅವರು ಹೇಳಿದರು.

ಕಾಂಗ್ರೆಸ್-ಜೆಡಿಎಸ್ ಪಕ್ಷದ ಯಾವ ಶಾಸಕರೂ ಪಕ್ಷ ಬಿಡುವುದಿಲ್ಲ. ಎಲ್ಲವನ್ನೂ ನಕಾರಾತ್ಮಕವಾಗಿ ಯಾಕೆ ಚಿಂತಿಸಬೇಕು. ಶಾಸಕ ಸತೀಶ್ ಜಾರಕಿಹೊಳಿ ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಆದರೂ, ಈ ಸುದ್ದಿಯನ್ನು ಯಾರು ಹಬ್ಬಿಸುತ್ತಿದ್ದಾರೆ ಅನ್ನೋದು ಗೊತ್ತಿಲ್ಲ. ಮುಖ್ಯಮಂತ್ರಿಯ ಕಾರ್ಯವೈಖರಿ ಬಗ್ಗೆಯೂ ಯಾವ ಶಾಸಕರು ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಯಾವ ದೇಶದ ಬಗ್ಗೆ ಹೇಳಿದ್ದಾರೆ. ಯಾರೋ ಹೇಳಿದ್ದು ಕೇಳಿ ಹೇಳಿದರೆ, ಅವರಿಗೆ ಮಾಹಿತಿ ಇರುವುದಿಲ್ಲ. ಭೂಕಂಪ ಆಗುತ್ತದೆ ಎಂದು ಯಡಿಯೂರಪ್ಪ ಹೇಳಿರುವುದಾಗಿ ಅವರು ಹೇಳಿದ್ದಾರೆ. ಸರಕಾರ ಸುಭದ್ರವಾಗಿದೆ, ಸುಭದ್ರವಾಗಿರಲಿದೆ ಎಂದು ಅವರು ಹೇಳಿದರು.

ಜೆಡಿಎಸ್ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ದಾನೀಶ್ ಅಲಿ ಮಾತನಾಡಿ, ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದಂತೆ ಕರ್ನಾಟಕದಲ್ಲಿ ಯಾವ ಭೂಕಂಪವು ಆಗುವುದಿಲ್ಲ. ಬಿಜೆಪಿ ಆಡಳಿತವಿರುವ ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಭೂಕಂಪ ಆಗಲಿದೆ. ಅದನ್ನೆ ಅವರು ಹೇಳಿರಬಹುದು ಎಂದು ವ್ಯಂಗ್ಯವಾಡಿದರು.

ಸಮನ್ವಯ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News