ಆ್ಯಂಬಿಡೆಂಟ್ ವಂಚನೆ ಪ್ರಕರಣ: ರೆಡ್ಡಿ ಆಪ್ತ ಅಲಿಖಾನ್‌ಗೆ ಷರತ್ತು ಬದ್ಧ ಜಾಮೀನು
Update: 2018-12-05 21:43 IST
ಬೆಂಗಳೂರು, ಡಿ.5: ಆ್ಯಂಬಿಡೆಂಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನರೆಡ್ಡಿ ಆಪ್ತ ಅಲಿಖಾನ್‌ಗೆ ಒಂದನೆ ಎಸಿಎಂಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಆ್ಯಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಅಲಿಖಾನ್ ಕೂಡ ಭಾಗಿಯಾಗಿದ್ದಾನೆ ಎಂದು ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಅಲಿಖಾನ್‌ನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಹೀಗಾಗಿ, ಅಲಿಖಾನ್ ತಮಗೆ ಜಾಮೀನು ಮಂಜೂರು ಮಾಡಬೇಕೆಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದನು. ಈ ಮೊದಲೇ ವಿಚಾರಣೆ ಪೂರ್ಣಗೊಳಿಸಿ ತೀರ್ಪುನ್ನು ಕಾಯ್ದಿರಿಸಿದ್ದ ನ್ಯಾಯಾಲಯವು ಬುಧವಾರ ಅಲಿಖಾನ್‌ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಸಿಸಿಬಿ ಪೊಲೀಸರ ತನಿಖೆಗೆ ಸಹಕಾರ ನೀಡಬೇಕು. ಯಾವುದೇ ಕಾರಣಕ್ಕೂ ಸಾಕ್ಷಿ ನಾಶ ಮಾಡಬಾರದು. ಅಲ್ಲದೆ, ಸಾಕ್ಷಿಯ ಮೇಲೆ ಪರಿಣಾಮ ಬೀರುವ ಕೆಲಸವನ್ನೂ ಮಾಡಬಾರದು ಹಾಗೂ 1 ಲಕ್ಷ ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ಪಡೆದು ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.