ಜನಾರ್ದನ ಪೂಜಾರಿ ವಿರುದ್ಧ ಕೀಳುಮಟ್ಟದ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

Update: 2018-12-06 13:58 GMT

ಮಂಗಳೂರು, ಡಿ.6: ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪರಿಚಿತ ದುಷ್ಕರ್ಮಿಯೋರ್ವ ಕೀಳುಮಟ್ಟದ ಹೇಳಿಕೆ ನೀಡಿ ಎನ್‌ಕೌಂಟರ್ ಮಾಡಲು ಕರೆ ನೀಡಿದ್ದು, ಈ ಬಗ್ಗೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಶಾಸಕ ಜೆ.ಆರ್.ಲೋಬೊ ಆಗ್ರಹಿಸಿ ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಅವರಿಗೆ ಮನವಿ ಸಲ್ಲಿಸಿದರು.

ಅಪರಿಚಿತ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡಿ ಧರ್ಮ, ಜಾತಿಗಳ ನಡುವೆ ಕಂದಕ ಸೃಷ್ಟಿ ಮಾಡುವಲ್ಲಿ ಯತ್ನಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕೀಳುಮಟ್ಟದ ಹೇಳಿಕೆ ನೀಡಿದ್ದು, ಇದು ಕಾನೂನು ಬಾಹಿರವಾಗಿದೆ. ಹೇಳಿಕೆಯಲ್ಲಿ ಜನಾರ್ದನ ಪೂಜಾರಿ ಅವರನ್ನು ದೇಶದ್ರೋಹಿ ಹಾಗೂ ಎನ್‌ಕೌಂಟರ್ ಮಾಡಬೇಕು ಎಂದು ಕರೆ ನೀಡಿದ್ದಾನೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಈ ನಿಟ್ಟಿನಲ್ಲಿ ತ್ವರಿತ ಹಾಗೂ ಪರಿಣಾಮಕಾರಿ ತನಿಖೆ ಮಾಡಬೇಕು. ಇಂತಹ ಹೇಳಿಕೆ ನೀಡುವ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಸುಮಾರು 15 ದಿನಗಳ ಹಿಂದೆ ಇದೇ ರೀತಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆಯೊಂದು ಬಂದಿದ್ದು, ಅದರಲ್ಲಿ ಜನಾರ್ದನ ಪೂಜಾರಿ ಹುಷಾರಿಲ್ಲದೆ ನಗರದ ಸ್ಥಳೀಯ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಶೋಚನೀಯವಾಗಿದೆ ಎಂದು ಅಪಪ್ರಚಾರ ಮಾಡಿದ್ದರು. ಈ ರೀತಿ ಅಪಪ್ರಚಾರದ ಹಿಂದೆ ವ್ಯವಸ್ಥಿತ ಜಾಲವಿದ್ದು, ಅದರ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಮನವಿ ಸ್ವೀಕರಿಸಿ, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂದಿರುವ ಮನವಿ ಆಧರಿಸಿ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶೀಘ್ರದಲ್ಲಿ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News