ಮೇಕೆದಾಟು ಯೋಜನೆಗೆ ವಿರೋಧ: ತಮಿಳುನಾಡು ಮುಖ್ಯಮಂತ್ರಿಗೆ ಸಚಿವ ಡಿಕೆಶಿ ಪತ್ರ

Update: 2018-12-06 15:14 GMT

ಬೆಂಗಳೂರು, ಡಿ.6: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಮೇಕೆದಾಟು ಅಣೆಕಟ್ಟು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿ, ಸುಪ್ರೀಂಕೋರ್ಟ್ ಮೊರೆ ಹೋಗಿರುವ ತಮಿಳುನಾಡು ಸರಕಾರಕ್ಕೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಪತ್ರ ಬರೆದಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿಗೆ ಪತ್ರ ಬರೆದಿರುವ ಶಿವಕುಮಾರ್, ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಸರಕಾರದ ಜೊತೆ ನಾವು ಚರ್ಚಿಸಲು ಸಿದ್ಧವಿದ್ದೇವೆ. ಈ ಸಂಬಂಧ ಚರ್ಚೆಗೆ ಸೂಕ್ತ ಸಮಯ ಹಾಗೂ ದಿನಾಂಕವನ್ನು ನೀವೆ ನಿರ್ಧರಿಸಿ ಎಂದು ಕೋರಿದ್ದಾರೆ.

ಮುಕ್ತವಾಗಿ ಚರ್ಚಿಸಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು. ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಅವಶ್ಯಕತೆಯಿದೆ. ತಪ್ಪುತಿಳುವಳಿಕೆಯಿಂದ ನೀವು ಮೇಕೆದಾಟು ಯೋಜನೆಯನ್ನು ವಿರೋಧಿಸುತ್ತಿದ್ದೀರಿ ಎಂದು ಪತ್ರದಲ್ಲಿ ಶಿವಕುಮಾರ್ ಉಲ್ಲೇಖಿಸಿದ್ದಾರೆ.

ಸಮುದ್ರಕ್ಕೆ ವ್ಯರ್ಥವಾಗಿ ಹರಿದು ಹೋಗುವ ನೀರನ್ನು ಹಿಡಿದಿಟ್ಟುಕೊಳ್ಳುವುದಷ್ಟೇ ನಮ್ಮ ಈ ಯೋಜನೆಯ ಉದ್ದೇಶವಾಗಿದೆ. ಕುಡಿಯುವ ನೀರಿಗಾಗಿ ಮಾತ್ರ ಈ ಯೋಜನೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಸುಪ್ರೀಂಕೋರ್ಟ್ ಆದೇಶದಂತೆ ನಿಮಗೆ ರಾಜ್ಯದಿಂದ ಬರುವ ನೀರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಅಣೆಕಟ್ಟಿನಲ್ಲಿ ನೀರು ಸಂಗ್ರಹವಾಗಿದ್ದರೆ, ಅದನ್ನು ನೀವು ಬಳಸಿಕೊಳ್ಳಬಹುದಾಗಿದೆ ಎಂದು ಶಿವಕುಮಾರ್ ಪತ್ರದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News