ಜನಾರ್ದನ ಪೂಜಾರಿ ವಿರುದ್ಧ ಆಡಿಯೊ ವೈರಲ್: ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲು

Update: 2018-12-06 17:42 GMT
ಜನಾರ್ದನ ಪೂಜಾರಿ 

ಮಂಗಳೂರು, ಡಿ.5: ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ವಿರುದ್ಧ ಆರೋಪ ಮಾಡಿ ಹೇಳಿಕೆಯನ್ನು ಆಡಿಯೊ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿರುವ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾವೂರಿನ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ್ ಕುಮಾರ್ ಅವರ ದೂರಿನಂತೆ ಈ ಪ್ರಕರಣ ದಾಖಲಾಗಿದೆ.
ಸಂಘದ ಅಧ್ಯಕ್ಷ ಚಂದ್ರಶೇಖರ್ ಕುಮಾರ್ ನೇತೃತ್ವದ ನಿಯೋಗವು ಜಿಲ್ಲಾಧಿಕಾರಿ ಮತ್ತು ಪೊಲೀಸ್ ಆಯುಕ್ತರಿಗೆ ಈ ಬಗ್ಗೆ ಮನವಿ ಸಲ್ಲಿಸಿತ್ತು.

ಮಾಜಿ ಶಾಸಕರಾದ ಜೆ.ಆರ್. ಲೋಬೊ ಮತ್ತು ವಿಜಯ ಕುಮಾರ್ ಶೆಟ್ಟಿ ನೇತೃತ್ವದ ಕಾಂಗ್ರೆಸ್ ನಿಯೋಗ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಪ್ರತ್ಯೇಕ ಮನವಿ ಸಲ್ಲಿಸಿತ್ತು. ಮನವಿ ಸ್ವೀಕರಿಸಿದ ಆಯುಕ್ತ ಟಿ.ಆರ್ ಸುರೇಶ್ ಅವರು ಈ ಬಗ್ಗೆ ಪ್ರಕರಣ ದಾಖಲಿಸಿ, ತನಿಖಾ ತಂಡವನ್ನು ರಚಿಸಿ, ತನಿಖೆ ನಡೆಸುವುದಾಗಿ ತಿಳಿಸಿದ್ದರು. ಅದರಂತೆ ಸಂಜೆ ವೇಳೆಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಜನಾರ್ದನ ಪೂಜಾರಿ ಅವರು ಡಿ. 2ರಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಪತ್ರಕರ್ತರ ಜತೆ ಮಾತನಾಡುತ್ತಾ ರಾಮ ಮಂದಿರ ನಿರ್ಮಾಣದ ಪರವಾಗಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅಪರಿಚಿತ ವ್ಯಕ್ತಿಯೋರ್ವ ಜನಾರ್ದನ ಪೂಜಾರಿ ಅವರನ್ನು ‘ಗಡೀಪಾರು ಮಾಡಬೇಕು, ಎನ್‌ಕೌಂಟರ್ ಮಾಡಬೇಕು’ ಎಂಬ ಹೇಳಿಕೆಯನ್ನು ನೀಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದನು. ಈ ಆಡಿಯೊ ವೈರಲ್ ಆಗಿತ್ತು. ಆಡಿಯೊ ಹರಿಯ ಬಿಟ್ಟ ದುಷ್ಕರ್ಮಿಯ ವಿರುದ್ಧ ವಿವಿಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಇದೀಗ ಈ ಕುರಿತಂತೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News