ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಸಾಧ್ಯವಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

Update: 2018-12-08 11:47 GMT

ಮೈಸೂರು,ಡಿ.8: ಪಂಚರಾಜ್ಯಗಳಿಗೆ ನಡೆದ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲ್ಲುವ ನಿರೀಕ್ಷೆ ಇದೆ. ಈ ಚುನಾವಣೆ ಮುಂದಿನ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದ್ದು, 2019ರ ಲೋಕಸಭಾ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದ ಟಿ.ಕೆ.ಲೇಔಟ್‍ನಲ್ಲಿರುವ ತಮ್ಮ ನಿವಾಸದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಂಚರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲ್ಲುವ ನಿರೀಕ್ಷೆ ಇದೆ. ಮಿಜೋರಾಂನಲ್ಲಿ ಅತಂತ್ರ ಫಲಿತಾಂಶ ಬರುವ ನಿರೀಕ್ಷೆ ಇದೆ. ಈ ಚುನಾವಣೆ ಮುಂದಿನ ಲೋಕಸಭಾ ಚುನಾವಣೆ  ಮೇಲೆ ಪರಿಣಾಮ ಬೀರಲಿದೆ. ಇದಕ್ಕೆ ನಮ್ಮ ರಾಜ್ಯದಲ್ಲಿ ನಡೆದ ಉಪಚುನಾವಣೆಗಳೇ ಸಾಕ್ಷಿ. 2019ರ  ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿದರು.

ಸಮ್ಮಿಶ್ರ ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ. ಯಾವೊಬ್ಬ ಶಾಸಕರೂ ಬಿಜೆಪಿ ಸಂಪರ್ಕದಲ್ಲಿಲ್ಲ. ಮುಖ್ಯಮಂತ್ರಿಯಾಗಬೇಕು ಎಂಬ ಯಡಿಯೂರಪ್ಪ ಅವರ ಕನಸು ಯಾವುದೇ ಕಾರಣಕ್ಕೂ ಈಡೇರುವುದಿಲ್ಲ ಎಂದು ಅವರು ಹೇಳಿದರು.

ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸರ್ಕಾರ ಬೀಳುತ್ತದೆ ಎಂದು ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ. ಯಡಿಯೂರಪ್ಪನವರಿಗೆ ವಯಸ್ಸಾಗಿದೆ. ಲೋಕಸಭೆ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಆಗುವ ಬಯಕೆ ಇಟ್ಟುಕೊಂಡಿದ್ದಾರೆ. ಅದು ಯಾವುದೇ  ಕಾರಣಕ್ಕೂ ಸಾಧ್ಯವಿಲ್ಲ. ನಮ್ಮ ಮೈತ್ರಿ ಸರ್ಕಾರ  ಸುಭದ್ರವಾಗಿದೆ ಎಂದರು.

ನಮ್ಮ ಸರ್ಕಾರದ ಅವಧಿಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ. ನಮ್ಮ ಸರಕಾರದ ಅವಧಿಯಲ್ಲಿ ಆರ್ಥಿಕ ಸಮತೋಲನ ಕಾಪಾಡಿಕೊಂಡು ಬಂದಿದ್ದೇವೆ. ಬಿಜೆಪಿಯವರು ಅಧಿಕಾರದಲ್ಲಿ ಇದ್ದಾಗ ಆರ್ಥಿಕ ಸಮತೋಲನ ಇರಲಿಲ್ಲ. ಇದೆಲ್ಲಾ ಗೊತ್ತಿದ್ದರೂ ಬಿಜೆಪಿ ನಾಯಕರು ಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದಗಂಗಾ ಶ್ರೀಗಳ ಆರೋಗ್ಯದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಸಿದ್ದಗಂಗಾ ಶ್ರೀಗಳು ಆರೋಗ್ಯವಾಗಿದ್ದಾರೆ. ಅವರು ಬೇಗ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News