×
Ad

ಗ್ರಾಪಂ ಸದಸ್ಯರ ಗೌರವಧನ ಹೆಚ್ಚಳಕ್ಕೆ ಪ್ರಯತ್ನ: ಸಚಿವೆ ಡಾ. ಜಯಮಾಲಾ

Update: 2018-12-08 18:11 IST

ಉಡುಪಿ, ಡಿ.8: ರಾಜ್ಯದ ಗ್ರಾಮ ಪಂಚಾಯತ್ ಸದಸ್ಯರ ಗೌರವಧನ ಹೆಚ್ಚಳ ಮತ್ತು ವಿವಿಧ ಸೌಲಭ್ಯಗಳ ಬಗ್ಗೆ ರಾಜ್ಯ ಸರಕಾರದ ಗಮನಕ್ಕೆ ತಂದು ಜಾರಿಗೆ ಪ್ರಯತ್ನಿಸಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಹೇಳಿದ್ದಾರೆ.

ಕೋಟತಟ್ಟು ಗ್ರಾಮ ಪಂಚಾಯತ್, ಉಡುಪಿ ಡಾ.ಶಿವರಾಮ ಕಾರಂತ ಪ್ರತಿಷ್ಠಾನದ ಆಶ್ರಯದಲ್ಲಿ ಡಾ.ಶಿವರಾಮ ಕಾರಂತ ಜನ್ಮದಿನೋತ್ಸವದ ಅಂಗ ವಾಗಿ ಶನಿವಾರ ಕೋಟ ವಿವೇಕ ಹೈಸ್ಕೂಲ್ ಆವರಣದಲ್ಲಿ ಆಯೋಜಿಸಲಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್‌ರಾಜ್ ಮತ್ತು ನಗರ ಸ್ಥಳೀಯಾ ಡಳಿತ ಪ್ರತಿನಿಧಿಗಳ ಕ್ರೀಡೋತ್ಸವ -ಸಾಂಸ್ಕೃತಿಕ ಸ್ಪರ್ಧೆಗಳು ‘ಹೊಳಪು-2018’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಗ್ರಾಪಂ ಸದಸ್ಯರ ಗೌರವ ಧನವನ್ನು 1000ರೂ.ನಿಂದ 3000ರೂ.ಗೆ ಹೆಚ್ಚಳ, 5 ಲಕ್ಷದ ವೆರೆಗಿನ ಆರೋಗ್ಯ ವಿಮೆ, ಉಚಿತ ಬಸ್ ಪಾಸ್ ಮತ್ತು ತಾಪಂ ಮತ್ತು ಜಿಪಂ ಸದಸ್ಯರ ಗೌರವ ಧನ ಹೆಚ್ಚಳಕ್ಕೆ ಸಂಬಂಧಿಸಿ ಸದಸ್ಯರ ಪರ ನಿಂತು ಮಾತನಾಡಿ ಜಾರಿಗೆ ಪ್ರಯತ್ನ ಮಾಡಲಾಗುವುದು ಎಂದರು.

ಸದಾ ಕಾಲ ಸಾರ್ವಜನಿಕರ ಸೇವೆಗಾಗಿ ಕರ್ತವ್ಯ ನಿರ್ವಹಿಸುವ ಜನಪ್ರತಿನಿಧಿ ಗಳಿಗೆ ಈ ರೀತಿಯ ಕ್ರೀಡಾಕೂಟ ಅತಿ ಅಗತ್ಯ. ಇದರಲ್ಲಿ ಕೆಲಸ ಮಾಡುವ ಉತ್ಸಾಹ ಇನ್ನಷ್ಟು ಹೆಚ್ಚಾಗುತ್ತದೆ. ಗೆಲುವು ಸೋಲನ್ನು ಸಮಾನವಾಗಿ ಸ್ವೀಕರಿಸ ಬೇಕು. ಇದರಲ್ಲಿ ಭಾಗವಹಿಸುವ ಮೂಲಕ ಎಲ್ಲರೂ ಗೆದ್ದಿದ್ದಾರೆ ಎಂದು ಅವರು ತಿಳಿಸಿದರು.

ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಹೆಚ್ಚಿನ ಅನುದಾನ ಒದಗಿಸುವಂತೆ ಗ್ರಾಪಂಗಳ ಪ್ರಮುಖ ಬೇಡಿಕೆಯಾಗಿದೆ. 14ನೆ ಹಣಕಾಸು ಆಯೋಗದಡಿ ಬಿಡುಗಡೆಯಾಗುವ ಸಂಪೂರ್ಣ ಅನುದಾನ ಅಭಿವೃಧ್ದಿ ಕಾರ್ಯಗಳಿಗೆ ಮಾತ್ರ ಬಳಕೆಯಾಗಬೇಕು. ಆಯೋಗದ ಅನುದಾನ ಮೊತ್ತದ ಹೆಚ್ಳಳಕ್ಕೆ ಕೇಂದ್ರದಲ್ಲಿ ಪ್ರಸ್ತಾಪಿಸಲಾಗುವುದು. ಅದೇ ರೀತಿ ರಾಜ್ಯ ಸರಕಾರ ಈ ಅನುದಾನವನ್ನು ವಿದ್ಯುತ್ ಬಿಲ್ ಸೇರಿದಂತೆ ಬೇರೆ ಕಾರ್ಯಗಳಿಗೆ ಬಳಸಿಕೊಳ್ಳಬಾರದು ಎಂದು ಹೇಳಿದರು.

ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಕ್ರೀಡಾ ಜ್ಯೋತಿ ಬೆಳಗಿಸಿ ದರು. ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಧ್ವಜಾರೋಹಣ ನೆರವೇರಿಸಿದರು. ಜಿಪಂ ಅಧ್ಯಕ್ಷ ದಿನಕರ ಬಾಬು ಕ್ರೀಡಾುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾಪು ಶಾಸಕ ಲಾಲಾಜಿ ಮೆಂಡನ್, ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ವಿಧಾನ ಪರಿಸತ್ ಸದಸ್ಯ ಐಯನೂರು ಮಂಜುನಾಥ್, ಜಿಪಂ ಉಪಾಧ್ಯಕ್ಷೆ ಶೀಲಾ ಶೆಟ್ಟಿ, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಮಾಜಿ ಸಂಸದ ಜಯಪ್ರಕಾಶ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಎ.ಜಿ.ಕೊಡ್ಗಿ, ಯುಪಿಸಿಎಲ್‌ನ ಕಿಶೋರ್ ಆಳ್ವ, ದೇವಿಪ್ರಸಾದ್ ಶೆಟ್ಟಿ, ಗುರ್ಮೆ ಸುರೇಶ್ ಶೆಟ್ಟಿ ಮೊದಲಾದರು ಉಪಸ್ಥಿತರಿದ್ದರು.

ಅಧ್ಯಕ್ಷತೆಯನ್ನು ಕೋಟ ಗ್ರಾಪಂ ಅಧ್ಯಕ್ಷ ರಘು ತಿಂಗಳಾಯ ವಹಿಸಿದ್ದರು. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರತಿಷ್ಠಾನದ ಗೌರವಾಧ್ಯಕ್ಷ ಆನಂದ ಸಿ. ಕುಂದರ್ ಸ್ವಾಗತಿಸಿದರು. ಸತೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಇದೇ ಸಂದರ್ಭದಲ್ಲಿ ಆಕರ್ಷಕ ಪಥ ಸಂಚಲನ ನಡೆಸಿದರು. ಈ ಕ್ರೀಡಾ ಕೂಟದಲ್ಲಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ 410 ಪಂಚಾಯತ್‌ರಾಜ್ ಮತ್ತು ಎಂಟು ನಗರ ಸ್ಥಳೀಯಾಡಳಿತಗಳ 104 ತಂಡಗಳು ಭಾಗವಹಿಸಿದ್ದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News