ಉತ್ತರ ಕರ್ನಾಟಕ ಅಭಿವೃದ್ಧಿಗೆ ಆಗ್ರಹಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ

Update: 2018-12-08 14:26 GMT

ಬೆಳಗಾವಿ, ಡಿ. 8: ಸುವರ್ಣ ವಿಧಾನಸೌಧದಲ್ಲಿ ಸೋಮವಾರದಿಂದ ಆರಂಭಗೊಳ್ಳಲಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಸಮಗ್ರ ಚರ್ಚೆಯಾಗಬೇಕೆಂದು ಆಗ್ರಹಿಸಿ ಕನ್ನಡ ಚಳವಳಿ ಪಕ್ಷದ ಮುಖಂಡ ವಾಟಾಳ್ ನಾಗರಾಜ್ ವಿನೂತನ ಪ್ರತಿಭಟನೆ ನಡೆಸಿದರು.

ಶನಿವಾರ ಇಲ್ಲಿನ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಮಲಗಿ ಪ್ರತಿಭಟನೆ ನಡೆಸಿದ ಬಳಿಕ ಮಾತನಾಡಿದ ವಾಟಾಳ್ ನಾಗರಾಜ್, ಬೆಳಗಾವಿ ಅಧಿವೇಶನವು ಜನಪ್ರತಿನಿಧಿಗಳಿಗೆ ಜಾತ್ರೆಯಂತೆ ಆಗಿದೆ. ಬೆಳಗಾವಿಗೆ ಬಂದು ಹತ್ತು ದಿನ ಜಾತ್ರೆ ಮಾಡಿ ಹೋಗುತ್ತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

ಶಾಸಕರು ಅಧಿವೇಶನದಲ್ಲಿ ಪಾಲ್ಗೊಳ್ಳುವುದಿಲ್ಲ, ಪಾಲ್ಗೊಂಡರೂ ಗಂಭೀರ ಚರ್ಚೆ ನಡೆಸುವುದಿಲ್ಲ. ಹೀಗಾಗಿ ಉತ್ತರ ಕರ್ನಾಟಕ ಭಾಗ ನಿರ್ಲಕ್ಷಕ್ಕೆ ಒಳಗಾಗಿದೆ ಎಂದು ಆರೋಪಿಸಿದ ಅವರು, ಉತ್ತರ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಈ ಭಾಗದವರನ್ನು ಡಿಸಿಎಂ ಮಾಡಬೇಕು ಎಂದು ಆಗ್ರಹಿಸಿದರು.

ಸುವರ್ಣ ವಿಧಾನಸೌಧದಿಂದಲೇ ಆಡಳಿತ ನಡೆಸುವಂತಾಗಬೇಕು. ಯಾರೊಬ್ಬ ಸಚಿವರೂ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ನಿರೀಕ್ಷಿತ ಮಟ್ಟದಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿಯಾಗಿಲ್ಲ ಎಂದು ವಾಟಾಳ್ ನಾಗರಾಜ್ ರಾಜ್ಯ ಸರಕಾರದ ವಿರುದ್ಧ ಕಿಡಿ ಕಾರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News