ಚಿಕ್ಕಮಗಳೂರು: ತಾಲೂಕು ಮಟ್ಟದ ಪ್ರತಿಭಾ ಕಾರಂಜಿ
ಚಿಕ್ಕಮಗಳೂರು, ಡಿ.8: ಮಕ್ಕಳಲಿರುವ ಸೂಕ್ತಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಪೂರಕವಾಗಿದೆ. ಮಕ್ಕಳು ಸಕ್ರೀಯವಾಗಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ತೋರಿಸುವುದರ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡು ಮಾದರಿ ವಿದ್ಯಾರ್ಥಿಗಳಾಗಲು ಪ್ರತಿಭಾ ಕಾರಂಜಿ ಅಪೂರ್ವ ವೇದಿಕೆಯಾಗಿದೆ ಎಂದು ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಜಸಂತಾ ಅನಿಲ್ ಕುಮಾರ್ ತಿಳಿಸಿದರು.
ಶನಿವಾರ ಆದಿಶಕ್ತಿನಗರದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ತಾಲೂಕು ಮಟ್ಟದ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳಲಿರುವ ಪ್ರತಿಭೆಗಳಾದ ಕಲೆ, ಸಾಹಿತ್ಯ, ಜಾನಪದ ಗೀತೆಗಳ ಸಾಂಸ್ಕೃತಿಕ ಚಟುವಟಿಕೆಯನ್ನು ಹೊರಹಾಕಲು ಉತ್ತಮ ವೇದಿಕೆಯಾಗಿದೆ ಎಂದು ತಿಳಿಸಿದರು.
ಸರಕಾರ ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ನೀಡಿ ಪ್ರತಿಭಾ ಕಾರಂಜಿ, ಮಕ್ಕಳ ಮೇಳ, ಕ್ರಿಡಾ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಮಕ್ಕಳು ತಮ್ಮಲ್ಲಿರುವ ಪ್ರತಿಭೆಯನ್ನು ತೋರಿ ತಮ್ಮ ಆಸಕ್ತಿಗೆ ಅನುಗುಣವಾಗಿ ಜೀವನವನ್ನು ರೂಪಿಸಿಕೊಳ್ಳಬೇಕು. ತೀರ್ಪುಗಾರರು ಮಕ್ಕಳ ಪ್ರತಿಭೆಗೆ ಅನ್ಯಾಯ ಮಾಡದೆ ನ್ಯಾಯಯುತ ತೀರ್ಪನ್ನು ನೀಡಬೇಕು, ಯಾವುದೆ ಗೊಂದಲ ಆಗದಂತೆ ವಿದ್ಯಾರ್ಥಿಯ ಪ್ರತಿಭೆಗೆ ನ್ಯಾಯ ಒದಗಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಸದಸ್ಯ ಸೋಮಶೇಖರ್ ಮಾತನಾಡಿ, ಪ್ರತಿಯೊಂದು ಮಗುವಿನಲ್ಲೂ ಒಂದಲ್ಲ ಒಂದು ಸಾಂಸ್ಕೃತಿಕ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಅನಾವರಣ ಮಾಡುವ ಮೂಲಕ ಮಕ್ಕಳು ಸರ್ವಾಂಗೀಣ ಬೆಳವಣಿಗೆ ಸಾಧಿಸಲು ಪೋಷಕರು, ಶಿಕ್ಷಕರು ಅವಕಾಶ ಕಲ್ಪಿಸಬೇಕು. ಪ್ರತಿಭಾ ಕಾರಂಜಿ ಈ ನಿಟ್ಟಿನಲ್ಲಿ ಮಕ್ಕಳಿಗೆ ಉತ್ತಮ ವೇಧಿಕೆ ಒದಗಿಸುತ್ತದೆ. ಸೋಲು, ಗೆಲುವಿನ ಬಗ್ಗೆ ಯೋಚಿಸದೆ ಸ್ಪರ್ಧೆಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಸದಸ್ಯೆ ಕವಿತಾಲಿಂಗರಾಜು ಮಾತನಾಡಿ, ದೇಶಕ್ಕಾಗಿ ಹೋರಾಡಿದ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಮಕ್ಕಳಿಗೆ ಪೋಷಕರು ತಿಳಿಸಿ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಮಾಡಿ ಪ್ರಗತಿಪರ ರೈತರಾಗುವುದರ ಜೊತೆಗೆ ಸೈನ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಬೇಕು ಎಂದರು.
ತಾಲೂಕು ಪಂಚಾಯತ್ ಅಧ್ಯಕ್ಷ ಜಯ್ಯಣ್ಣ ಮಾತನಾಡಿ, ವಿದ್ಯಾರ್ಥಿಗಳು ಆದುನಿಕ ಯುಗದಲ್ಲಿ ಸ್ಪರ್ಧೆಯನ್ನು ಎದುರಿಸಿ ಬದುಕು ಕಟ್ಟಿಕೊಳ್ಳುವುದರ ಜೊತೆಗೆ ಸಾಮಾಜಿಕ ಕಳಕಳಿಯನ್ನು ಬೆಳೆಸಿಕೊಳ್ಳುವುದು ಅಗತ್ಯ ಎಂದರು.
ಈ ಸಂದರ್ಭದಲ್ಲಿ ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಹಿರಿಗಯ್ಯ, ತಾಪಂ ಉಪಾಧ್ಯಕ್ಷ ರಮೇಶ್, ಸದಸ್ಯರಾದ ರೇಖಾಅನಿಲ್ ಕುಮಾರ್, ದ್ರಾಕ್ಷಾಯಿಣಿ ಪೂರ್ಣೇಶ್, ಮಹೇಶ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಿ.ಎಸ್.ಪರಮೇಶ್, ಕಾರ್ಯದರ್ಶಿ ಕಿರಣ್ ಕುಮಾರ್, ಶಾಲೆಯ ಮುಖ್ಯ ಶಿಕ್ಷಕ ನೀಲಕಂಠಪ್ಪ, ಎಸ್.ಡಿ.ಎಂ.ಸಿ ಅಧ್ಯಕ್ಷ ನಾಗರಾಜ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಶರಶ್ಚಂದ್ರ, ಕಛೇರಿಯ ರವಿಕುಮಾರ್, ಜಯರಾಂ, ಗ್ರಾಪಂ ಸದಸ್ಯರಾದ ವಾಜಿದ್, ಅನೀಫ್, ಸುಶೀಲಮ್ಮ, ಶಿವಕುಮಾರ್, ಉಪಸ್ಥಿತರಿದ್ದರು, ಕಿರಣ್ ಸ್ವಾಗತಿಸಿ, ಮೋಹನಾಕ್ಷಿ ನಿರೂಪಿಸಿ ಪರಮೇಶ್ ವಂದಿಸಿದರು.