ಬಿಜೆಪಿ ವಿರೋಧಿ ಕೂಟ: ಇಂದು ಮಹತ್ವದ ಸಭೆ

Update: 2018-12-10 03:59 GMT
ಫೈಲ್ ಫೋಟೊ

ಹೊಸದಿಲ್ಲಿ, ಡಿ.10: ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ಎದುರಿಸುವ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ವಿರೋಧ ಪಕ್ಷಗಳ ಮಹತ್ವದ ಸಭೆ ಸೋಮವಾರ ನಡೆಯಲಿದೆ. ಲೋಕಸಭೆಯ ಚಳಿಗಾಲದ ಅಧಿವೇಶನ ಆರಂಭದ ಮುನ್ನಾ ದಿನ ನಡೆಯುವ ಈ ಸಭೆ ರಾಜಕೀಯವಾಗಿ ವಿಶೇಷ ಮಹತ್ವ ಪಡೆದಿದೆ.

ಆಂಧ್ರ ಪ್ರದೇಶ ಮುಖ್ಯಮಂತ್ರಿ ಹಾಗೂ ತೆಲುಗುದೇಶಂ ನಾಯಕ ಎನ್.ಚಂದ್ರಬಾಬು ನಾಯ್ಡು ಅವರು, ಬಿಜೆಪಿ ವಿರೋಧಿ ಶಕ್ತಿಗಳು ಒಂದೇ ವೇದಿಕೆಯಲ್ಲಿ ತರುವ ಪ್ರಯತ್ನ ಮಾಡಿದ್ದು, ಕಾಂಗ್ರೆಸ್ ಮುಖಂಡರು ಹಾಗೂ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯಚೂರಿ 20ಕ್ಕೂ ಹೆಚ್ಚು ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನ ನಡೆಸಿದ್ದಾರೆ. ಬಿಜೆಪಿಯೇತರ ಮುಖ್ಯಮಂತ್ರಿಗಳು ಕೂಡಾ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಪ್ರಜಾಪ್ರಭುತ್ವವನ್ನು ಉಳಿಸುವ ಸಲುವಾಗಿ ರಾಜಕೀಯ ಬದ್ಧತೆ ಹೊಂದಿದ ವಿಸ್ತರಣಾ ಕಾರ್ಯಕ್ರಮ ಇದಾಗಿದೆ ಎಂದು ಚಂದ್ರಬಾಬು ನಾಯ್ಡು ತಮ್ಮ ಪ್ರಯತ್ನವನ್ನು ಬಣ್ಣಿಸಿದ್ದಾರೆ.

ನಾಯ್ಡು, ಯಚೂರಿ ಹಾಗೂ ಕಾಂಗ್ರೆಸ್ ಮುಖಂಡರು ಎಲ್ಲ ಪಕ್ಷಗಳ ಮುಖ್ಯಸ್ಥರನ್ನು ಈ "ದೆಹಲಿ ಶೃಂಗ"ಕ್ಕೆ ಕರೆದಿದ್ದು, ಇದರಲ್ಲಿ ಭವಿಷ್ಯದ ಕಾರ್ಯತಂತ್ರಗಳ ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತದೆ.

ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ ಗಾಂಧಿ ಮತ್ತು ಯುಪಿಎ ಸಂಚಾಲಕಿ ಸೋನಿಯಾಗಾಂಧಿ, ಚಂದ್ರಬಾಬು ನಾಯ್ಡು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಸಿಪಿಎಂ, ಸಿಪಿಐ ಮುಖಂಡರು, ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್, ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್, ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಫಾರೂಕ್ ಅಬ್ದುಲ್ಲಾ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಜೆಡಿಎಸ್ ನಾಯಕರಾದ ಎಚ್.ಡಿ.ಕುಮಾರಸ್ವಾಮಿ ಮತ್ತು ಎಚ್.ಡಿ.ದೇವೇಗೌಡ, ಜೆಎಂಎಂ, ಜನ ವಿಕಾಸ ಮೋರ್ಚಾ, ಆರ್‌ಎಲ್‌ಡಿಯ ಅಜಿತ್ ಸಿಂಗ್ ಭಾಗವಹಿಸುವ ನಿರೀಕ್ಷೆ ಇದೆ.

ಬಿಎಸ್ಪಿ ನಾಯಕಿ ಮಾಯಾವತಿ ಮತ್ತು ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಅವರನ್ನೂ ಆಹ್ವಾನಿಸಲಾಗಿದೆ. ಎನ್‌ಡಿಎ ಮಿತ್ರಕೂಟದ ಆರ್‌ಎಲ್‌ಎಸ್‌ಪಿ ಮುಖಂಡ ಹಾಗೂ ಕೇಂದ್ರ ಸಚಿವ ಉಪೇಂದ್ರ ಖುಷ್ವಾಹ ಕೂಡಾ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂಬ ವದಂತಿ ದಟ್ಟವಾಗಿ ಹಬ್ಬಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News