ಯಡಿಯೂರಪ್ಪನವರ ಸರ್ಟಿಫಿಕೇಟ್ ನನಗೆ ಅಗತ್ಯವಿಲ್ಲ: ಕುಮಾರಸ್ವಾಮಿ

Update: 2018-12-10 16:40 GMT

ಬೆಳಗಾವಿ,ಡಿ.10: ರೈತರ ಸಾಲ ಮನ್ನಾ ಮಾಡಿಲ್ಲ, ಋಣಮುಕ್ತ ಪತ್ರ ಕೊಟ್ಟಿಲ್ಲ ಎಂಬ ಪ್ರತಿಪಕ್ಷ ಬಿಜೆಪಿ ಆರೋಪಕ್ಕೆ ಸದನದಲ್ಲಿ ಉತ್ತರ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಹೇಳಿದರು.

ಅಧಿವೇಶನದಲ್ಲಿ ಪಾಲ್ಗೊಳ್ಳಲು ಇಲ್ಲಿಗೆ ಆಗಮಿಸಿದ ಸಂದರ್ಭದಲ್ಲಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಸಾಲ ಮನ್ನಾ ಮಾಡಿ ಋಣಮುಕ್ತ ಪತ್ರ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಪ್ರತಿಪಕ್ಷ ಬಿಜೆಪಿ ಅನಗತ್ಯ ಅಪಪ್ರಚಾರ ಮಾಡುತ್ತಿದೆ. ಈ ಬಗ್ಗೆ ಸದನದಲ್ಲಿ ಉತ್ತರ ನೀಡುತ್ತೇನೆ. ಅಧಿವೇಶನ ಸುಲಲಿತವಾಗಿ ನಡೆಯಲಿದೆ. ಯಾವುದೇ ಸಮಸ್ಯೆ ಇಲ್ಲ. ಯಡಿಯೂರಪ್ಪನವರ ಸರ್ಟಿಫಿಕೇಟ್ ನನಗೆ ಅಗತ್ಯವಿಲ್ಲ ಎಂದು ಅವರು ಹೇಳಿದರು.

ಅಧಿವೇಶನ ಮುಗಿದ ಬಳಿಕ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುವುದಾಗಿ ಹೇಳಿರುವುದನ್ನು ಸ್ವಾಗತಿಸುತ್ತೇನೆ. ಪ್ರತಿಭಟನೆ ಮಾಡುವುದು ಪ್ರತಿಯೊಬ್ಬರ ಹಕ್ಕು ಎಂದರು. ಮುಖ್ಯಮಂತ್ರಿಗಳನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಶಾಸಕರಾದ ಲಕ್ಷ್ಮೀ ಹೆಬ್ಬಾಳ್ಕರ್, ಮೇಯರ್ ಚಿಕ್ಕಲದಿನ್ನಿ, ಮಾಜಿ ಶಾಸಕ ಕೋನರೆಡ್ಡಿ ಆಗಮಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News