ಅಲ್ಪಸಂಖ್ಯಾತ ಸಮುದಾಯಕ್ಕೆ ಎರಡು ಸಚಿವ ಸ್ಥಾನ ನೀಡಿ: ಸಚಿವ ಝಮೀರ್ ಅಹ್ಮದ್

Update: 2018-12-13 11:49 GMT

ಬೆಳಗಾವಿ, ಡಿ.13: ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಎರಡು ಸಚಿವ ಸ್ಥಾನ ಕೇಳಿದ್ದೇವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 80 ಕ್ಷೇತ್ರಗಳಲ್ಲಿ ಜಯ ಗಳಿಸಲು ಅಲ್ಪಸಂಖ್ಯಾತರ ಸಮುದಾಯದ ಪಾತ್ರವೂ ಪ್ರಮುಖವಾಗಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಝಮೀರ್ ಅಹ್ಮದ್ ಖಾನ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 22ರಂದು ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಯಾವುದೇ ಗೊಂದಲವಿಲ್ಲ. ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧವಾಗಿದ್ದು, ಯಾವುದೇ ನಿರ್ಧಾರ ಕೈಗೊಂಡರೂ ಒಪ್ಪಿಕೊಳ್ಳುತ್ತೇವೆ. ಒಂದು ವೇಳೆ ಸಂಪುಟದಿಂದ ಕೈಬಿಟ್ಟರೂ ಒಪ್ಪಿಕೊಳ್ಳುವುದಾಗಿ ತಿಳಿಸಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಐದು ವರ್ಷ ಜೆಡಿಎಸ್ ಹಾಗೂ ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೆಂದು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ನಾವು ಯಾವುದೇ ಒತ್ತಡ ಹಾಕುತ್ತಿಲ್ಲ. ಸಿಎಂಗೆ ಮುಕ್ತ ಅವಕಾಶ ನೀಡಲಾಗಿದೆ. ಮಾಜಿ ಸಚಿವ ಬಸವರಾಜ ಹೊರಟ್ಟಿ ನೀಡಿರುವ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ ಎಂದು ಸ್ಪಷ್ಪಪಡಿಸಿದರು.

ವಕ್ಫ್ ಮಂಡಳಿ ಸ್ಥಿರಾಸ್ತಿ ಕಬಳಿಕೆಗೆ ಸಂಬಂಧಿಸಿದಂತೆ ಅಂದಿನ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅನ್ವರ್ ಮಾನಿಪ್ಪಾಡಿ ವರದಿ ಕುರಿತಂತೆ ನ್ಯಾಯಾಲಯ ನೀಡಿರುವ ಆದೇಶದ ಬಗ್ಗೆ ತನಗೆ ಮಾಹಿತಿ ಇಲ್ಲ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಕೋರ್ಟ್ ಆದೇಶವನ್ನೂ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News