ಸಾಲ ಸೌಲಭ್ಯಗಳ ಪಾರದರ್ಶಕತೆಗಾಗಿ 'ಐರಾವತ ಯೋಜನೆ': ಸಚಿವ ಪ್ರಿಯಾಂಕ್ ಖರ್ಗೆ

Update: 2018-12-14 13:01 GMT

ಬೆಳಗಾವಿ: ಡಿ.14: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿಗಳಿಗೆ ನೀಡಲಾಗುವ ಸಾಲ ಸೌಲಭ್ಯ ಯೋಜನೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಐರಾವತ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಶುಕ್ರವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪ ವೇಳೆಯಲ್ಲಿ ಶಾಸಕ ಆರ್.ಅಶೋಕ್ ಪ್ರಶ್ನೆಗೆ ಉತ್ತರಿಸಿದ ಅವರು, ಜನಸಂಖ್ಯೆಗೆ ಅನುಗುಣವಾಗಿ ಹಾಗೂ ಅನುದಾನದ ಲಭ್ಯತೆ ಆಧಾರದ ಮೇಲೆ ಫಲಾನುಭವಿಗಳ ಗುರಿ ನಿಗದಿಗೊಳಿಸಲಾಗುವುದು. ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ನಿಗದಿತ ಮಾನದಂಡಗಳನ್ನು ಅನುಸರಿಸಲಾಗುತ್ತಿದೆ ಎಂದು ತಿಳಿಸಿದರು.

ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ ಕಳೆದ ಮೂರು ವರ್ಷದಲ್ಲಿ ಪರಿಶಿಷ್ಟ ಜಾತಿಯ 554 ಹಾಗೂ ಪರಿಶಿಷ್ಟ ಪಂಗಡದ 143 ಫಲಾನುಭವಿಗಳಿಗೆ ಕಾರು ಸಾಲ ಸೌಲಭ್ಯ ಯೋಜನೆಯ ಲಾಭವನ್ನು ಒದಗಿಸಲಾಗಿದೆ ಎಂದು ಅವರು ಸದನಕ್ಕೆ ಮಾಹಿತಿ ನೀಡಿದರು.

ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ಇರುವ ಪರಿಶಿಷ್ಟ ಪಂಗಡಗಳಿಗೆ ಸೇರಿದ ಆದಿವಾಸಿ ಸಮುದಾಯಗಳಿಗಾಗಿ 2018-19ನೆ ಸಾಲಿನಿಂದ ಜಾರಿಗೆ ಬರುವಂತೆ ನವಗ್ರಾಮ ನಿರ್ಮಾಣ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯಲ್ಲಿ ಈಗಾಗಲೇ ಗ್ರಾಮಗಳ ಆಯ್ಕೆ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಅವರು ತಿಳಿಸಿದರು.

ಈ ಯೋಜನೆಯಡಿಯಲ್ಲಿ ಗ್ರಾಮಗಳಿಗೆ ಸಿಮೆಂಟ್ ಕಾಂಕ್ರೀಟ್ ರಸ್ತೆ ನಿರ್ಮಾಣ, ಒಳಚರಂಡಿ ನಿರ್ಮಾಣ, ಕುಡಿಯುವ ನೀರಿನ ಪೂರೈಕೆ, ಕಾಲೋನಿಗಳ ಸಂಪರ್ಕ ರಸ್ತೆ ನಿರ್ಮಾಣ, ವಿದ್ಯುತ್ ಸಂಪರ್ಕ, ಹೊಸ ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News