ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ಕರಿಯಣ್ಣ ವಿಧಿವಶ

Update: 2018-12-14 19:14 GMT

ಶಿವಮೊಗ್ಗ, ಡಿ. 14: ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ಕರಿಯಣ್ಣರವರು ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು. ಪತ್ನಿ, ಮೂವರು ಪುತ್ರಿಯರು ಹಾಗೂ ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.  

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಕಳೆದ ಆರು ತಿಂಗಳಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ. ರಾತ್ರಿ ಸುಮಾರು 10 ಗಂಟೆಗೆ ಶಿವಮೊಗ್ಗ ನಗರಕ್ಕೆ ಪಾರ್ಥಿವ ಶರೀರ ಆಗಮಿಸುವ ಸಾಧ್ಯತೆಯಿದೆ. 

'ವಿನೋಬನಗರದ ಕಲ್ಲಳ್ಳಿಯಲ್ಲಿರುವ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಿಡಲಾಗುತ್ತಿದೆ. ಶನಿವಾರ ಮಧ್ಯಾಹ್ನ ಹೊಳೆಹೊನ್ನೂರು ಪಟ್ಟಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಬಿ. ಬೀರನಹಳ್ಳಿ ಗ್ರಾಮದಲ್ಲಿರುವ ಮೃತರ ತೋಟದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ' ಎಂದು ಕರಿಯಣ್ಣರವರ ಆಪ್ತ ಹಾಗೂ ಹೊಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ. ಹನುಮಂತುರವರು ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ. 

ರಾಜಕೀಯ ಹಿನ್ನೆಲೆ: ಕಾಂಗ್ರೆಸ್ ಪಕ್ಷದಲ್ಲಿ ಹಲವು ಹುದ್ದೆಗಳನ್ನು ಕರಿಯಣ್ಣ ನಿಭಾಯಿಸಿದ್ದರು. 1978 ರಲ್ಲಿ ಶಿವಮೊಗ್ಗ ನಗರಾಭಿವೃದ್ದಿ ಮಂಡಳಿಯ ಅಧ್ಯಕ್ಷರಾಗುವ ಮೂಲಕ ರಾಜಕೀಯ ಪ್ರವೇಶಿಸಿದ್ದರು. 1983 ರಲ್ಲಿ ಶಿವಮೊಗ್ಗ ನಗರಸಭೆಯ ಸದಸ್ಯರಾಗಿಯೂ ಆಯ್ಕೆಯಾಗಿದ್ದರು. 1989 ಮತ್ತು 1999 ರಲ್ಲಿ ಹೊಳೆಹೊನ್ನೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಎಸ್.ಎಂ.ಕೃಷ್ಣರವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅನುಸೂಚಿತ ಜಾತಿ ಹಾಗೂ ಪಂಗಡಳ ಅನುದಾನ ಪರಿಶೀಲನಾ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಕೆಪಿಸಿಸಿ ಉಪಾಧ್ಯಕ್ಷರಾಗಿ, ಕೆಪಿಟಿಸಿಎಲ್ ನಿಗಮದ ಅಧ್ಯಕ್ಷರಾಗಿ, ಎಐಸಿಸಿ ಸದಸ್ಯರಾಗಿ, ಶಾಸಕಾಂಗ ಪಕ್ಷದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಅವರು, ಪ್ರಸ್ತುತ ಕೆಪಿಸಿಸಿ ಕಾರ್ಯದರ್ಶಿಯಾಗಿದ್ದರು. 

ಶಿವಮೊಗ್ಗದ ಸಿಟಿ ಕೋ ಆಪರೇಟಿವ್ ಬ್ಯಾಂಕ್, ಕೋಟೆ ಶ್ರೀ ಮಾರಿಕಾಂಬ ಸೇವಾ ಸಮಿತಿ, ರವೀಂದ್ರ ನಗರದ ಶ್ರೀ ಪ್ರಸನ್ನ ಗಣಪತಿ ದೇವಾಲಯ ಸಮಿತಿ ಸೇರಿದಂತೆ ವಿವಿಧ ಸಂಘಸಂಸ್ಥೆಗಳಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸಿದ್ದರು. 2013 ರ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿದು ಪರಾಭವಗೊಂಡಿದ್ದರು. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿಯೇ ಕರಿಯಣ್ಣರವರು ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಕಾರಣದಿಂದ ಅವರು ಚುನಾವಣಾ ಕಣಕ್ಕಿಳಿಯದೆ ಪುತ್ರ ಡಾ. ಶ್ರೀನಿವಾಸ್‍ರನ್ನು ಅಖಾಡಕ್ಕಿಳಿಸಿದ್ದರು. 

ಜಿಲ್ಲಾ ಕಾಂಗ್ರೆಸ್ ಸಂತಾಪ
ಮಾಜಿ ಶಾಸಕ ಕರಿಯಣ್ಣರ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ಪಕ್ಷ ತೀವ್ರ ಶೋಕ ವ್ಯಕ್ತಪಡಿಸಿದೆ. 'ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಕರಿಯಣ್ಣರವರ ಪಾತ್ರ ಅಪಾರವಾದುದಾಗಿದೆ. ಜನಮಾನಸದಲ್ಲಿ ತಮ್ಮದೆ ಆದ ಪ್ರಭಾವ, ವರ್ಚಸ್ಸು ಹೊಂದಿದ್ದರು. ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ' ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀ.ನಾ.ಶ್ರೀನಿವಾಸ್ ಸಂತಾಪ ವ್ಯಕ್ತಪಡಿಸಿದ್ದಾರೆ.  

'ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಮಾತ್ರವಲ್ಲದೆ, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಕರಿಯಣ್ಣರವರ ಪಾತ್ರ ಅಪಾರವಾದುದಾಗಿದೆ. ವಯೋಭೇದವಿಲ್ಲದೆ ಎಲ್ಲರನ್ನು ಒಟ್ಟಾಗಿ ಕೊಂಡೊಯ್ಯುತ್ತಿದ್ದರು. ಅವರ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ' ಎಂದು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೊಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಹನುಮಂತು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. 

ವಿವಿಧ ಪಕ್ಷಗಳ ಜನಪ್ರತಿನಿಧಿಗಳು, ನಾಯಕರು, ಸಂಘಸಂಸ್ಥೆಗಳ ಮುಖಂಡರು ಕರಿಯಣ್ಣರವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಮೃತರ ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News