ಸುಳ್ವಾಡಿ ಪ್ರಕರಣ: ಅಗತ್ಯವಿದ್ದರೆ ಖಾಸಗಿ ವೈದ್ಯರ ಸೇವೆ ಪಡೆಯಲು ಸಿಎಂ ಸೂಚನೆ

Update: 2018-12-15 05:26 GMT

ಬೆಂಗಳೂರು, ಡಿ.15: ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ಸಂಭವಿಸಿದ ದುರಂತದಲ್ಲಿ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಅಗತ್ಯಬಿದ್ದಲ್ಲಿ ಖಾಸಗಿ ವೈದ್ಯರ ಸೇವೆ ಪಡೆಯುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ.

ಇಂದು ಬೆಳಗ್ಗೆಯಿಂದ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹಾಗೂ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವ ಸಿಎಂ ಘಟನೆಯ ಮಾಹಿತಿ ಪಡೆಯುತ್ತಿದ್ದಾರೆ. ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಚಾಮರಾಜನಗರ ಪೋಲಿಸ್ ವರಿಷ್ಠಾಧಿಕಾರಿಯೊಂದಿಗೆ ಮಾತನಾಡಿದ ಸಿಎಂ, ಈ ಘಟನೆಯಲ್ಲಿ ವಿಷಾಹಾರ ಸೇವಿಸಿ ಅಸ್ವಸ್ಥಗೊಂಡವರು ಅಕ್ಕಪಕ್ಕದ ಗ್ರಾಮಗಳಲ್ಲಿ ಇದ್ದಾರೆಯೇ ಎಂದು ಪತ್ತೆ ಹಚ್ಚಿ ಅವರ ಚಿಕಿತ್ಸೆಗೆ ಕ್ರಮ ಕೈಗೊಳ್ಳಲು ಸೂಚಿಸಿದರು. ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ ಇದ್ದಲ್ಲಿ ಖಾಸಗಿ ವೈದ್ಯರ ಸೇವೆ ಪಡೆಯುವಂತೆ ಸೂಚಿಸಿದ್ದಾರೆ

ಪ್ರಕರಣದ ತನಿಖೆಯನ್ನು ಶೀಘ್ರವೇ ಪೂರ್ಣಗೊಳಿಸಿ ಘಟನೆಗೆ ಕಾರಣ ಪತ್ತೆ ಮಾಡುವಂತೆ  ಅವರು ತಿಳಿಸಿದರು.


ತಪ್ಪಿತಸ್ಥರ ವಿರುದ್ಧ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್

ಸುಳ್ವಾಡಿ ಗ್ರಾಮದ ಮಾರಮ್ಮನ ದೇವಸ್ಥಾನದಲ್ಲಿ ನಡೆದ ಘಟನೆಯಲ್ಲಿ 11 ಜನ ಸಾವನ್ನಪ್ಪಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ಈ ಘಟನೆಯಲ್ಲಿ ಯಾರದ್ದೇ ಕೈವಾಡ ಇದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ  ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. 

ಈ ಪ್ರಕರಣದ ತನಿಖೆ ನಡೆಯುತ್ತಿದೆ. ಇಬ್ಬರನ್ನು ಈಗಾಗಲೇ ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ. ಇಂಥ ಘಟನೆ ಮರುಕಳಿಸದಂತೆ ಮುಜುರಾಯಿ ಇಲಾಖೆಯು ಎಲ್ಲ ದೇವಸ್ಥಾನಕ್ಕೆ ಎಚ್ಚರಿಕೆ ಹಾಗೂ ಸುರಕ್ಷತೆ ವಹಿಸಲು ಸೂಚನೆ ಕೊಡಲಾಗಿದೆ ಎಂದು ಹೇಳಿದರು.


ಸಿದ್ದರಾಮಯ್ಯ ದಿಗ್ಭ್ರಮೆ

ವಿಷಾಹಾರ ಸೇವನೆಯಿಂದ ಚಾಮರಾಜನಗರ ಜಿಲ್ಲೆಯಲ್ಲಿ ಸಂಭವಿಸಿರುವ ದುರಂತದ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸಿದ್ದರಾಮಯ್ಯ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗ ಶೆಟ್ಡಿ, ಹನೂರು ಕ್ಷೇತ್ರದ ಶಾಸಕ ನರೇಂದ್ರ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಘಟನೆ ಕುರಿತು ಮಾಹಿತಿ ಪಡೆದಿದ್ದಾರೆ.

ದುರಂತದಲ್ಲಿ ಮೃತರಾದವರ ಕುಟುಂಬದವರಿಗೆ ಪರಿಹಾರ ಒದಗಿಸುವ, ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರಿಗೆ ಚಿಕಿತ್ಸೆ ಕೊಡಿಸುವತ್ತ ಗಮನ ಹರಿಸುವಂತೆ ಸಚಿವರು ಹಾಗೂ ಶಾಸಕರಿಗೆ ಸಿದ್ದರಾಮಯ್ಯ ಸೂಚಿಸಿದರು.

ಚಾಮರಾಜನಗರ ಜಿಲ್ಲಾಧಿಕಾರಿ ಜೊತೆಗೂ ಸಿದ್ದರಾಮಯ್ಯ ಮಾತನಾಡಿ, ಘಟನೆ ಕುರಿತು ಮಾಹಿತಿ ಪಡೆದುಕೊಂಡರು. ಪ್ರಕರಣದ ಬಗ್ಗೆ ಕೂಡಲೇ ತನಿಖೆ ಆಗಬೇಕು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News