ರೋಹನ್ ಬೋಪಣ್ಣ, ಮಲಪ್ರಭಾ ಜಾದವ್ ರಿಗೆ ಚೆಕ್‌ ವಿತರಿಸಿ ಸನ್ಮಾನಿಸಿದ ಡಿಸಿಎಂ

Update: 2018-12-15 13:39 GMT

ಬೆಂಗಳೂರು, ಡಿ.15: ಇತ್ತೀಚೆಗೆ ನಡೆದ ಏಷ್ಯನ್‌ಗೇಮ್ಸ್‌ನಲ್ಲಿ ಚಿನ್ನದ ಪದಕ ಪಡೆದ ಅಂತರ್‌ರಾಷ್ಟ್ರೀಯ ಟೆನ್ನಿಸ್ ಆಟಗಾರ ರೋಹಣ್ ಬೋಪಣ್ಣ ಮತ್ತು ಕುಸ್ತಿ ಮಾದರಿಯ ಕುರಾಸ್ ಕ್ರೀಡೆಯಲ್ಲಿ ಕಂಚಿನ ಪದಕ ಪಡೆದ ಬೆಳಗಾವಿಯ ಕ್ರೀಡಾಪಟು ಮಲ್ಲಪ್ರಭಾ ಜಾದವ್‌ರನ್ನು ಉಪಮುಖ್ಯಮಂತ್ರಿ ಹಾಗೂ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಸನ್ಮಾನಿಸಿದರು.

ಶನಿವಾರ ಸದಾಶಿವ ನಗರದಲ್ಲಿರುವ ತಮ್ಮ ಕಚೇರಿಯಲ್ಲಿ ಕ್ರೀಡಾಪಟುಗಳನ್ನು ಸನ್ಮಾನಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಪದಕ ಪಡೆದವರಿಗೆ ನಗದು ಬಹುಮಾನವನ್ನು ಕ್ರೀಡಾ ಇಲಾಖೆಯಿಂದ ನೀಡಲಾಗುತ್ತಿದೆ. ರೋಹನ್ ಬೋಪಣ್ಣಗೆ 25 ಲಕ್ಷ ರೂ. ಹಾಗೂ ಮಲಪ್ರಭಾ ಜಾದವ್‌ಗೆ 8 ಲಕ್ಷ ರೂ. ಚೆಕ್ ವಿತರಿಸಲಾಗಿದೆ ಎಂದರು. ಮಲಪ್ರಭಾ ಜಾದವ್ ನಮ್ಮ ಕ್ರೀಡಾ ಶಾಲೆಯಲ್ಲಿ ತರಬೇತಿ ಪಡೆದಿದ್ದಾರೆ. ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಗ್ರಾಂಡ್ ಮಾಸ್ಟರ್ ಚೆಸ್‌ನಲ್ಲಿ ಮೊದಲ ಸ್ಥಾನ ಪಡೆದ ತೇಜ್‌ಕುಮಾರ್ ಹಾಗೂ ಸ್ಟಾನಿ ಜಿ.ಎ. ಅವರಿಗೆ ತಲಾ 10 ಲಕ್ಷ ರೂ. ನಗದು ಬಹುಮಾನ ನೀಡಲಾಗಿದೆ ಎಂದು ಪರಮೇಶ್ವರ್ ಹೇಳಿದರು.

ಇಡೀ ರಾಜ್ಯ, ಜಿಲ್ಲಾವಾರು ಕ್ರೀಡೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹಲವು ಕೆಲಸ ಕೈಗೆತ್ತಿಕೊಳ್ಳಲಾಗಿದೆ. ಎಲ್ಲ ಜಿಲ್ಲೆಯಲ್ಲೂ ಮೂಲಸೌಕರ್ಯ, ಸಿಂಥಟಿಕ್ ಟ್ರಾಕ್ ಹಾಗೂ ಒಳಾಂಗಣ ಕ್ರೀಡಾಂಗಣ(ಇಂಡೋರ್ ಸ್ಟೇಡಿಯಂ) ನಿರ್ಮಾಣಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಡಿ.22ಕ್ಕೆ ಸಂಪುಟ ವಿಸ್ತರಣೆ: ಸಚಿವ ಸಂಪುಟ ವಿಸ್ತರಣೆ ಮುನ್ನ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿಯನ್ನು ಭೇಟಿ ಮಾಡಿ ಚರ್ಚೆ ನಡೆಸಲಾಗುವುದು. ಸದ್ಯಕ್ಕೆ ಡಿ.22ರಂದು ಸಂಪುಟ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ. ಎಲ್ಲವೂ ಸುಸೂತ್ರವಾಗಿ ನಡೆದಲ್ಲಿ ನಿಗದಿಯಂತೆ ಸಂಪುಟ ವಿಸ್ತರಣೆ ಆಗಲಿದೆ ಎಂದು ಪರಮೇಶ್ವರ್ ಹೇಳಿದರು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಡಿ.18ರಂದು ಬೆಳಗಾವಿಯಲ್ಲಿ ಕರೆಯಲಾಗಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೂ ಆಹ್ವಾನ ನೀಡಲಾಗಿದೆ. ಶಾಸಕರು ತಮ್ಮ ಸಮಸ್ಯೆಗಳನ್ನು ಮುಖ್ಯಮಂತ್ರಿ ಎದುರು ನೇರವಾಗಿ ವ್ಯಕ್ತಪಡಿಸಿ, ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗುತ್ತದೆ ಎಂದು ಪರಮೇಶ್ವರ್ ಹೇಳಿದರು.

‘ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ’

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಲ್ವಾಡಿ ಮಾರ್ತಳ್ಳಿಯ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸ್ವೀಕರಿಸಿ 13 ಮಂದಿ ಮೃತಪಟ್ಟಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ಈ ಘಟನೆಯಲ್ಲಿ ಯಾರ ಕೈವಾಡವಿದ್ದರೂ ಅವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ತನಿಖೆಗೆ ಆದೇಶಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ, ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ಹಾಗೂ ಅಗತ್ಯ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳುವಂತೆ ಮುಜರಾಯಿ ಇಲಾಖೆಯ ಎಲ್ಲ ದೇವಸ್ಥಾನಗಳಿಗೆ ಸೂಚನೆ ನೀಡಲಾಗಿದೆ.

-ಡಾ.ಜಿ.ಪರಮೇಶ್ವರ್, ಉಪ ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News