ಹನೂರು ವಿಷ ಪ್ರಸಾದ ಪ್ರಕರಣ: ಅಸ್ವಸ್ಥರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

Update: 2018-12-15 12:52 GMT

ಬೆಂಗಳೂರು, ಡಿ.15: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಲ್ವಾಡಿ ಮಾರ್ತಳ್ಳಿಯ ದೇವಾಲಯದಲ್ಲಿ ಪ್ರಸಾದ ಸ್ವೀಕರಿಸಿ ಅಸ್ವಸ್ಥರಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅಗತ್ಯ ಸೌಲಭ್ಯಗಳಿಲ್ಲದಿದ್ದರೆ ಖಾಸಗಿ ಆಸ್ಪತ್ರೆಗಳಿಗೆ ಅಸ್ವಸ್ಥರನ್ನು ದಾಖಲಿಸಿ ಚಿಕಿತ್ಸೆ ಕೊಡಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚನೆ ನೀಡಿದ ಸಿದ್ದರಾಮಯ್ಯ, ಈ ಘಟನೆ ಸಂಬಂಧ ಸಿಐಡಿ ತನಿಖೆ ನಡೆಸುವ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಜೊತೆ ದೂರವಾಣಿ ಮೂಲಕ ಚರ್ಚೆ ನಡೆಸಿದರು. 

ರಾಜ್ಯ ಸರಕಾರದ ವತಿಯಿಂದ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಹಾಗೂ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ತಲಾ 1 ಲಕ್ಷ ರೂ.ಗಳ ಪರಿಹಾರ ಘೋಷಿರುವುದಾಗಿ ತಿಳಿಸಿದ ಸಿದ್ದರಾಮಯ್ಯ, ಮೃತರ ಕುಟುಂಬದ ಸದಸ್ಯರಿಗೆ ಇದೇ ಸಂದರ್ಭದಲ್ಲಿ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಬಿ.ಝೆಡ್.ಝಮೀರ್‌ ಅಹ್ಮದ್‌ ಖಾನ್, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ, ಸಂಸದ ಆರ್.ಧ್ರುವ ನಾರಾಯಣ್, ಶಾಸಕ ನರೇಂದ್ರ, ಮಾಜಿ ಶಾಸಕರಾದ ಮಂಜುನಾಥ, ಸೋಮಶೇಖರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News