ಮಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

Update: 2018-12-15 13:57 GMT

ಮಂಗಳೂರು, ಡಿ.15: ನಾಲ್ಕು ವರ್ಷದ ಬಾಲಕಿ ಮೇಲೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯ ಶನಿವಾರ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದೆ.

ಕಂಕನಾಡಿ ನಿವಾಸಿ ಚಂದ್ರಶೇಖರ್ ಅಲಿಯಾಸ್ ರಾಜೇಶ್ (49) ಶಿಕ್ಷೆಗೊಳಗಾದ ಅಪರಾಧಿ.

ದಂಡದ ಮೊತ್ತ ಪಾವತಿಸಲು ತಪ್ಪಿದರೆ 6 ತಿಂಗಳ ಕಠಿಣ ಸಜೆ ಅನುಭವಿಸಬೇಕು. ದಂಡದ ಮೊತ್ತದಲ್ಲಿ 7,500 ರೂ. ಸಂತ್ರಸ್ತೆಗೆ ಪರಿಹಾರವಾಗಿ ನೀಡಬೇಕು ಎಂದು ನ್ಯಾಯಾಲಯ ತೀರ್ಪಿನಲ್ಲಿ ತಿಳಿಸಿದೆ.

ಪ್ರಕರಣದ ಹಿನ್ನೆಲೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಚಂದ್ರಶೇಖರ್ ಈ ಹಿಂದೆ ಅಸೈಗೋಳಿ ಸಮೀಪದ ಗ್ರಾಮವೊಂದರಲ್ಲಿ ಪತ್ನಿ ಹಾಗೂ ಮಕ್ಕಳೊಂದಿಗೆ ವಾಸವಾಗಿದ್ದ. ಸಂತ್ರಸ್ತ ಬಾಲಕಿ ಮನೆಯವವರು ಪಕ್ಕದ ಮನೆಯಲ್ಲಿದ್ದರು. ಬಾಲಕಿ ಟಿವಿ ನೋಡಲು ಚಂದ್ರಶೇಖರ್ ಮನೆಗೆ ತೆರಳುತ್ತಿದ್ದಳು. 2016 ಜುಲೈ 23ರಂದು ಟಿವಿ ನೋಡಲೆಂದು ಬಾಲಕಿ ಮನೆಗೆ ಬಂದಿದ್ದಾಗ ಚಂದ್ರಶೇಖರ್, ಬಾಲಕಿ ಮೇಲೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಸಗಿದ್ದ. ವಿಷಯ ತಿಳಿದ ಬಾಲಕಿಯ ತಾಯಿ ಕೊಣಾಜೆ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಬಾಲಕಿಯ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಲೈಂಗಿಕ ದೌರ್ಜನ್ಯ ಎಸಗಿರುವುದು ದೃಢಪಟ್ಟಿತ್ತು.

ಪ್ರಕರಣದ ತನಿಖೆ ನಡೆಸಿದ ಕೊಣಾಜೆ ಠಾಣೆಯ ಅಂದಿನ ಇನ್‌ಸ್ಪೆಕ್ಟರ್ ಅಶೋಕ್ ಅವರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶೆ ಬಿ.ಆರ್.ಪಲ್ಲವಿ ತೀರ್ಪು ಪ್ರಕಟಿಸಿದ್ದಾರೆ. ವಿಶೇಷ ಸರಕಾರಿ ಅಭಿಯೋಜಕ ಸಿ.ವೆಂಕಟರಮಣ ಸ್ವಾಮಿ ಸರಕಾರದ ಪರ ವಾದ ಮಂಡಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News