ಕ್ರೀಡೆಯಿಂದ ದೈಹಿಕ, ಮಾನಸಿಕ ಸಮತೋಲನ ಕಾಯ್ದುಕೊಳ್ಳಲು ಸಾಧ್ಯ: ಎಸ್ಪಿ ಡಾ. ರವಿಕಾಂತೇ ಗೌಡ

Update: 2018-12-16 16:24 GMT

ಮಂಗಳೂರು, ಡಿ.16: ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಸಮತೋಲನ ಕಾಯ್ದುಕೊಳ್ಳಲು ಸಾಧ್ಯ. ಹಾಗಾಗಿ ಒತ್ತಡದಿಂದ ಕಾರ್ಯನಿರ್ವಹಿಸುವ ಮಾಧ್ಯಮ ಕ್ಷೇತ್ರದ ಪ್ರತಿನಿಧಿಗಳು ಕ್ರೀಡೆಯಲ್ಲಿ ತೊಡಗಿಸಿಕೊಂಡಾಗ ವೃತ್ತಿ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರವಿಕಾಂತೇ ಗೌಡ ಅಭಿಪ್ರಾಯಪಟ್ಟರು.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಇದರ ವತಿಯಿಂದ ನಗರದ ಮೈದಾನದಲ್ಲಿ ರವಿವಾರ ನಡೆದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ, ಅವರು ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ಬಗ್ಗೆ ಹೊರ ಭಾಗಗಳಲ್ಲಿ ತಪ್ಪು ಕಲ್ಪನೆಯಿದೆ. ಆದರೆ ನಿಜವಾಗಿಯೂ ಇಲ್ಲಿ ಪರಿಸ್ಥಿತಿ ಹಾಗಿಲ್ಲ. ಶಾಂತಿ, ಸೌಹಾರ್ದಕ್ಕೆ ಮಾಧ್ಯಮಗಳ ಕೊಡುಗೆ ಅಪಾರ. ಪತ್ರಕರ್ತರ ಸಂಘ ಬ್ರಾಂಡ್ ಮಂಗಳೂರು ಪರಿಕಲ್ಪನೆಯಲ್ಲಿ ಹಮ್ಮಿಕೊಂಡ ಯೋಜನೆಯು ಪರಿಣಾಮಕಾರಿಯಾಗಿದೆ. ಪೊಲೀಸ್ ಇಲಾಖೆಯಿಂದ ಇದಕ್ಕೆ ಪೂರ್ಣ ಸಹಕಾರ ನೀಡಲಾಗುವುದು ಎಂದು ಡಾ. ರವಿಕಾಂತೇ ಗೌಡ ಭರವಸೆ ನೀಡಿದರು.

ಮನಪಾ ಆಯುಕ್ತ ಮುಹಮ್ಮದ್ ನಝೀರ್, ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.

ವಾರ್ತಾಧಿಕಾರಿ ಖಾದರ್ ಶಾ, ಪ್ರೆಸ್‌ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಕೆ. ಆನಂದ ಶೆಟ್ಟಿ, ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು.

ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ವಿಜಯ ಕೋಟ್ಯಾನ್ ಪಡು ಸ್ವಾಗತಿಸಿದರು. ಹರೀಶ್ ಮೋಟುಕಾನ ವಂದಿಸಿದರು. ಸಂಘದ ಉಪಾಧ್ಯಕ್ಷ ಶರತ್ ಶೆಟ್ಟಿ ಕಿನ್ನಿಗೋಳಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News