×
Ad

ಗಂಗಾ ಕಲ್ಯಾಣ ಯೋಜನೆ ಅನುಷ್ಠಾನದಲ್ಲಿ ಲೋಪ: ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ; ಪ್ರಿಯಾಂಕ್ ಖರ್ಗೆ

Update: 2018-12-17 19:59 IST

ಬೆಳಗಾವಿ,ಡಿ.17: ಗಂಗಾ ಕಲ್ಯಾಣ ಯೋಜನೆಯ ಅನುಷ್ಠಾನದಲ್ಲಿ ಲೋಪವೆಸಗಿರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಿ ಇಲಾಖೆಯ ವಿಶ್ವಾಸಾರ್ಹತೆ ಹೆಚ್ಚಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಸೋಮವಾರ ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಎಂ.ಕೆ.ಪ್ರಾಣೇಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇಲಾಖೆಯ ಹಿರಿಯ ಸಲಹೆಗಾರರಾಗಿರುವ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಸಮಿತಿಯು ಈ ಕುರಿತು ವಿಚಾರಣೆ ನಡೆಸುತ್ತಿದೆ. ರಾಜ್ಯ ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮಿತಿಯು ಕೂಡಾ ಯೋಜನೆ ಅನುಷ್ಠಾನದ ಬಗ್ಗೆ ವಿಶೇಷ ಒತ್ತು ನೀಡಿ ಕೂಲಂಕಷ ವಿಚಾರಣೆ ಮಾಡಬಹುದು ಎಂದರು.

ಕೋಲಾರ, ಚಿಕ್ಕಬಳ್ಳಾಪುರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗಂಗಾ ಕಲ್ಯಾಣ ಯೋಜನೆ ಅನುಷ್ಠಾನದಲ್ಲಿ ದೂರುಗಳು ಬಂದಿದ್ದವು. ಈ ಪ್ರಕರಣಗಳಲ್ಲಿ ಇಲಾಖಾ ವಿಚಾರಣೆ ನಡೆಸಿ ಮೂವರು ಅಧಿಕಾರಿಗಳ ಎರಡು ವಾರ್ಷಿಕ ವೇತನ ಭಡ್ತಿಗಳನ್ನು ತಡೆಹಿಡಿಯಲಾಗಿದೆ. ಒಬ್ಬರನ್ನು ಅಮಾನತು ಮಾಡಲಾಗಿದೆ. ಇಬ್ಬರು ಅಧಿಕಾರಿಗಳ ವಿರುದ್ಧ ವಿಚಾರಣೆ ನಡೆಯುತ್ತಿದೆ. ಯಾವುದಾದರೂ ನಿರ್ದಿಷ್ಟ ಪ್ರಕರಣಗಳ ಬಗ್ಗೆ ಮಾಹಿತಿ ನೀಡಿದರೆ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಲು ಗಂಭೀರ ಕ್ರಮ ತೆಗೆದುಕೊಳ್ಳಲಾಗುವುದು. ಪಾರದರ್ಶಕವಾಗಿ ದರ ನಿಗದಿಗೊಳಿಸಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಸದನಕ್ಕೆ ಮಾಹಿತಿ ನೀಡಿದರು.

ಸಚಿವರ ಉತ್ತರದಿಂದ ಸಮಾಧಾನಗೊಳ್ಳದ ಪ್ರತಿಪಕ್ಷದ ಸದಸ್ಯರು ಈ ಕುರಿತು ವಿಚಾರಣೆ ನಡೆಸಲು ಜಂಟಿ ಸದನ ಸಮಿತಿ ರಚಿಸಬೇಕು. ಇಲ್ಲವೇ ಅರ್ಧ ಗಂಟೆ ಚರ್ಚೆಗೆ ಅವಕಾಶ ಕಲ್ಪಿಸಬೇಕು ಎಂದು ಪಟ್ಟು ಹಿಡಿದು ಸದನದ ಬಾವಿಗಿಳಿದು ಧರಣಿ ಆರಂಭಿಸಿದರು. ಸದನದಲ್ಲಿ ಗದ್ದಲ ವಾತಾವರಣ ನಿರ್ಮಾಣವಾದ್ದರಿಂದ ಸಭಾಪತಿ ಕೆ.ಪ್ರತಾಪ್‍ಚಂದ್ರ ಶೆಟ್ಟಿ ಸದನವನ್ನು ಅರ್ಧಗಂಟೆ ಕಾಲ ಮುಂದೂಡಿದರು.

ಸದನ ಮರುಸಮಾವೇಶಗೊಂಡ ಬಳಿಕ ಪ್ರತಿಪಕ್ಷದ ಸದಸ್ಯರು ಧರಣಿ ಮುಂದುವರೆಸಿದರು. ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ, ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸಲಹೆಯಂತೆ ಈ ವಿಷಯಕ್ಕಾಗಿ ಪ್ರತ್ಯೇಕ ಅರ್ಧಗಂಟೆ ಚರ್ಚೆಗೆ ಅವಕಾಶ ಕಲ್ಪಿಸಬಹುದು ಎಂದು ಸಭಾಪತಿಗೆ ಮನವಿ ಮಾಡಿದರು.

ಸಭಾಪತಿ ಕೆ. ಪ್ರತಾಪ್‍ಚಂದ್ರ ಶೆಟ್ಟಿ ಅವರು ಗಂಗಾ ಕಲ್ಯಾಣ ಯೋಜನೆಯ ಅನುಷ್ಠಾನ ಕುರಿತು ಚರ್ಚೆಗೆ ಪ್ರತ್ಯೇಕ ಅರ್ಧ ಗಂಟೆ ಸಮಯಾವಕಾಶ ಕಲ್ಪಿಸುವುದಾಗಿ ಪ್ರಕಟಿಸಿದರು. ಆಗ ಪ್ರತಿಪಕ್ಷದ ಸದಸ್ಯರು ಧರಣಿ ಮೊಟಕುಗೊಳಿಸಿ ಮತ್ತೆ ಕಲಾಪದಲ್ಲಿ ಪಾಲ್ಗೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News