ಮುಂದಿನ ಬಜೆಟ್‍ನಲ್ಲಿ ಪ್ರಾಥಮಿಕ ಶಿಕ್ಷಣ ಬಲವರ್ಧನೆಗೆ ಹೆಚ್ಚು ಅನುದಾನ: ಮುಖ್ಯಮಂತ್ರಿ ಕುಮಾರಸ್ವಾಮಿ
ಬೆಳಗಾವಿ, ಡಿ.18: ಪ್ರಾಥಮಿಕ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮುಂದಿನ ಬಜೆಟ್‍ನಲ್ಲಿ ಹೆಚ್ಚು ಅನುದಾನವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿಧಾನ ಸಭೆಯಲ್ಲಿ ಮಂಗಳವಾರ ಭರವಸೆ ನೀಡಿದರು.
ಪ್ರಶ್ನೋತ್ತರ ಕಲಾಪ ವೇಳೆಯಲ್ಲಿ ಬಿಜೆಪಿ ಸದಸ್ಯ ಬಿ.ಶ್ರೀರಾಮುಲು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ರಾಜ್ಯದಲ್ಲಿ ಪ್ರಾಥಮಿಕ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಹಾಗೂ ಶಿಕ್ಷಣ ವಾಹಿನಿಯಲ್ಲಿ ಮಕ್ಕಳನ್ನು ವೈಜ್ಞಾನಿಕ ಶಿಕ್ಷಣದತ್ತ ಕೊಂಡೊಯ್ಯಲು ಮುಂದಿನ ಬಜೆಟ್‍ನಲ್ಲಿ ಹೆಚ್ಚಿನ ಅನುದಾನ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಪ್ರಾಥಮಿಕ ಶಿಕ್ಷಣ ವ್ಯವಸ್ಥೆಯಲ್ಲಿನ ಕೊರತೆಗಳನ್ನು ಸರಿಪಡಿಸುವ ದೃಷ್ಟಿಯಿಂದಲೇ 1200 ಕೋಟಿ ರೂ. ಮೂಲಸೌಲಭ್ಯ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ. ರಾಜ್ಯಾದ್ಯಂತ ಒಂದು ಸಾವಿರ ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಇಂಗ್ಲಿಷ್ ಮಾಧ್ಯಮವನ್ನು ಆರಂಭಿಸಲಾಗಿದೆ. ಅಲ್ಲದೆ, ಗಡಿಭಾಗದ ಶಾಲೆಗಳ ಸಮಸ್ಯೆಯನ್ನು ಬಗೆಹರಿಸುವ ಪ್ರಯತ್ನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ವಿವರಿಸಿದರು.
ಪ್ರಾಥಮಿಕ ಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸುವ ಅಗತ್ಯವಿದ್ದು, ಮುಂದಿನ ವರ್ಷ ಈ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಅಲ್ಲದೆ, ಭವಿಷ್ಯದ ಪ್ರಜೆಗಳಾದ ವಿದ್ಯಾರ್ಥಿಗಳನ್ನು ಸದೃಢವಾಗಿ ಹಾಗೂ ಪೌಷ್ಠಿಕಯುಕ್ತವಾಗಿ ಬೆಳೆಸುವ ಉದ್ದೇಶದಿಂದ ಮುಂದಿನ ಬಜೆಟ್‍ನಲ್ಲಿ ಹೆಚ್ಚಿನ ಅನುದಾನ ಒದಗಿಸಲು ಯೋಜಿಸಲಾಗಿದೆ ಎಂದು ಅವರು ಹೇಳಿದರು.
ವಿದ್ಯಾರ್ಥಿಗಳ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಶಾಲೆಗಳನ್ನು ಮುಚ್ಚಿರುವುದಿಲ್ಲ. ಆದರೆ, ಶೂನ್ಯ ದಾಖಲಾತಿಗಳನ್ನು ಹೊಂದಿರುವ 318 ಶಾಲೆಗಳಲ್ಲಿನ ಶಿಕ್ಷಕರನ್ನು ತಾತ್ಕಾಲಿಕವಾಗಿ ಅವಶ್ಯಕತೆ ಇರುವ ಸಮೀಪದ ಶಾಲೆಗಳಿಗೆ ನಿಯೋಜಿಸಲಾಗಿದೆ. ಇಂತಹ ಶಾಲೆಗಳಲ್ಲಿ ಮಕ್ಕಳ ದಾಖಲಾತಿಯಾದಲ್ಲಿ ಶಿಕ್ಷಕರನ್ನು ಪುನಃ ಹಿಂದಿನ ಶಾಲೆಗಳಿಗೆ ಮರುನಿಯುಕ್ತಿಗೊಳಿಸಿ ಶಾಲೆಗಳನ್ನು ಪುನರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ಅಲ್ಲದೆ ಒಂದರಿಂದ ಮೂರನೇ ತರಗತಿಯವರೆಗೆ ನಲಿ-ಕಲಿ ಪದ್ಧತಿಯಲ್ಲಿ ಸಂತಸದಾಯಕ ಕಲಿಕೆಗೆ ಒತ್ತು ನೀಡಲಾಗಿದೆ. ಗಣಿತ ಕಲಿಕೆ ಬಲವರ್ಧನೆಗೆ ನಾಲ್ಕರಿಂದ ಐದನೇ ತರಗತಿಗೆ ಗಣಿತ ಕಲಿಕಾ ಆಂದೋಲನ ಅನುಷ್ಠಾನಗೊಳಿಸಿ ಗಣಿತ ಕಿಟ್ ವಿತರಿಸಲಾಗಿದೆ. ಎರಡು ಜೊತೆ ಉಚಿತ ಸಮವಸ್ತ್ರ ಹಾಗೂ ಪ್ರೌಢ ಶಾಲೆಗಳಿಗೆ ಒಂದು ಜೊತೆ ಉಚಿತ ಸಮವಸ್ತ್ರ ವಿತರಿಸಲಾಗಿದೆ. 'ಶೂ ಭಾಗ್ಯ', 'ವಿಶ್ವಾಸ ಕಿರಣ', 'ಅಕ್ಷರ ದಾಸೋಹ ಮತ್ತು ಕ್ಷೀರಭಾಗ್ಯ' ಸೇರಿದಂತೆ ಮುಂತಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದೆ ಎಂದರು.
ಕಳಪೆ ಬೈಸಿಕಲ್ ವಿತರಣೆಗೆ ಸಂಬಂಧಿಸಿದಂತೆ ಈಗಾಗಲೇ ತನಿಖೆಗೆ ಆದೇಶ ನೀಡಲಾಗಿದೆ. ಉಚಿತ ಬೈಸಿಕಲ್ ವಿತರಣೆ ಕಾರ್ಯಕ್ರಮವನ್ನು ಮುಂದುವರೆಸಲಾಗಿದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.