ಭಕ್ತರಿಗೆ ನೀಡುವ ಪ್ರಸಾದದ ಪರೀಕ್ಷೆ ಸರಿಯಲ್ಲ: ಬಿ.ಎಸ್.ಯಡಿಯೂರಪ್ಪ

Update: 2018-12-18 18:46 GMT

ಶಿವಮೊಗ್ಗ, ಡಿ. 18: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದ ದೇವಾಲಯಗಳಲ್ಲಿ ಪ್ರಸಾದ ಪರೀಕ್ಷೆಗೆ ಆದೇಶಿಸಿರುವುದು ಸರಿಯಾದ ಕ್ರಮವಲ್ಲವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. 

ಮಂಗಳವಾರ ನಗರದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಚಾಮರಾಜನಗರ ಸುಳ್ವಾಡಿ ದೇವಾಲಯದಲ್ಲಿ ವಿತರಿಸಲಾದ ಪ್ರಸಾದದಲ್ಲಿ ಯಾರು ವಿಷ ಬೆರೆಸಿದ್ದಾರೆಯೋ ಅವರಿಗೆ ಕಠಿಣ ಶಿಕ್ಷೆಯಾಗಬೇಕು. ಈ ವಿಷಯದಲ್ಲಿ ಸರ್ಕಾರ ಆದ್ಯ ಗಮನಹರಿಸಬೇಕು. ಭವಿಷ್ಯದಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ಎಚ್ಚರವಹಿಸಬೇಕು ಎಂದರು. 

ಉತ್ತರ ಕರ್ನಾಟಕದ ಅಭಿವೃದ್ದಿ ನೀರಾವರಿ ಯೋಜನೆಗಳ ಕುರಿತು ಸದನದಲ್ಲಿ ವಿಸ್ತೃತ ಚರ್ಚೆ ನಡೆಯಬೇಕಿದೆ. ರಾಷ್ಟ್ರೀಕೃತ ಬ್ಯಾಂಕ್‍ಗಳು ಯಾವುದೇ ಕಾರಣಕ್ಕೂ ಋಣ ಮುಕ್ತ ಪತ್ರ ನೀಡಲು ಸಾಧ್ಯವಿಲ್ಲವೆಂದು ಹೇಳುತ್ತಿವೆ. ಮುಖ್ಯಮಂತ್ರಿಯವರು ಇಂತಹ ವಿಚಾರಗಳ ಬಗ್ಗೆ ಗಮನಹರಿಸದೆ ಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಟೀಕಿಸಿದರು. 

ಇತ್ತೀಚೆಗೆ ಪ್ರಕಟವಾದ ಪಂಚರಾಜ್ಯಗಳ ಚುನಾವಣಾ ಫಲಿತಾಂಶವು ಮುಂಬರುವ ಲೋಕಸಭೆ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಈಗಾಗಲೇ ಸಿದ್ದತೆ ಆರಂಭಿಸಿದೆ ಎಂದು ಇದೇ ಸಂದರ್ಭದಲ್ಲಿ ಯಡಿಯೂರಪ್ಪ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News