10 ಕೋಟಿ ಮಾನವ ದಿನಗಳ ಸೃಷ್ಟಿ ಗುರಿ: ಸಚಿವ ಕೃಷ್ಣಬೈರೇಗೌಡ

Update: 2018-12-19 17:18 GMT

ಬೆಳಗಾವಿ, ಡಿ.19: ರಾಜ್ಯದಲ್ಲಿ ತಲೆದೋರಿರುವ ಬರಪರಿಸ್ಥಿತಿಯಿಂದ ಗ್ರಾಮೀಣ ಪ್ರದೇಶದ ಜನರು ಉದ್ಯೋಗ ಹರಿಸಿ ಗುಳೇ ಹೋಗುವುದನ್ನು ತಪ್ಪಿಸಲು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ 4400 ಕೋಟಿ ರೂ.ವೆಚ್ಚದಲ್ಲಿ ಪ್ರಸಕ್ತ ಸಾಲಿನಲ್ಲಿ ಹತ್ತು ಕೋಟಿಗೂ ಹೆಚ್ಚು ಮಾನವ ದಿನಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

ವಿಧಾನಸಭೆಯಲ್ಲಿ ಬುಧವಾರ ಬರಪರಿಸ್ಥಿತಿ ಕುರಿತ ಚರ್ಚೆಗೆ ಉತ್ತರಿಸಿದ ಅವರು, ಪ್ರಸ್ತುತ ವಾರ್ಷಿಕ 8.5 ಕೋಟಿ ಮಾನವ ದಿನಗಳನ್ನು ಸೃಜಿಸುವ ಗುರಿ ಇದ್ದು, ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗ್ರಾಮೀಣ ಜನತೆ ಉದ್ಯೋಗಕ್ಕಾಗಿ ಬೇರೆಡೆಗೆ ಗುಳೇ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ಪ್ರಸಕ್ತ ಸಾಲಿನ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಹತ್ತು ಕೋಟಿಗೂ ಹೆಚ್ಚು ಮಾನವ ದಿನಗಳನ್ನು ಸೃಷ್ಟಿಸುವ ಗುರಿ ಹೊಂದಿರುವುದಾಗಿ ತಿಳಿಸಿದರು.

ರಾಜ್ಯದಲ್ಲಿ ಇದುವರೆಗೆ 9.16 ಕೋಟಿ ಮಾನವ ದಿನಗಳನ್ನು ಸೃಷ್ಟಿಸಿದ್ದು ದಾಖಲೆಯಾಗಿತ್ತು. ಕಳೆದ ಅಕ್ಟೋಬರ್ ಒಂದು ತಿಂಗಳಲ್ಲಿ 1.2 ಕೋಟಿ  ಅತೀ ಹೆಚ್ಚು ಮಾನವ ದಿನಗಳನ್ನು ಸೃಜಿಸಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದ್ದು, ಪ್ರತಿದಿನವೂ ಆ ದಿನದ ಪ್ರಗತಿಯನ್ನು  ಪರಿಶೀಲಿಸಲಾಗುತ್ತಿದೆ. ಕಡಿಮೆ ಪ್ರಗತಿ ಸಾಧಿಸಿರುವುದು ಕಂಡು ಬಂದಲ್ಲಿ ತಕ್ಷಣ ಈ ಕುರಿತು ಕಾರಣಗಳನ್ನು ಕೇಳಿ ಬಗೆಹರಿಸುವ ಪ್ರಯತ್ನ ಮಾಡಲಾಗಿದೆ ಎಂದು ಅವರು ವಿವರಿಸಿದರು.

ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ 2700 ಕೋಟಿ ರೂ. ವೆಚ್ಚ ಮಾಡಲಾಗಿದ್ದು,  ಕೇಂದ್ರ ಸರ್ಕಾರದಿಂದ 500 ಕೋಟಿ ರೂ. ಬಾಕಿ ಇದೆ. ಅಲ್ಲದೇ ಕಳೆದ ಸಾಲಿನಲ್ಲಿ 930 ಕೋಟಿ ರೂ. ಕೇಂದ್ರ ಸರ್ಕಾರದಿಂದ ಬಾಕಿ ಇದ್ದು, ಬಾಕಿ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿಯವರು ಪ್ರಧಾನಿಯವರಿಗೆ ಪತ್ರ ಬರೆದಿದ್ದಾರೆ ಎಂದು ಸದನದಲ್ಲಿ ಅವರು ಸ್ಪಷ್ಟಪಡಿಸಿದರು.

ಪ್ರಸಕ್ತ ವರ್ಷ ಎಂಟೂವರೆ ಕೋಟಿ ಮಾನವ ದಿನಗಳನ್ನು 3700 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿತ್ತು. ಬರ ಪರಿಸ್ಥಿತಿ ಇರುವುದರಿಂದ ಮಾನವ ದಿನಗಳನ್ನು ಹೆಚ್ಚಿಸಲಾಗುತ್ತಿದೆ. ಈಗಾಗಲೇ ಶೇ.75ರಷ್ಟು ಅಂದರೆ 6.15ಕೋಟಿ ಮಾನವ ದಿನಗಳನ್ನು ನರೇಗಾ ಯೋಜನೆಯಡಿ ಸೃಷ್ಟಿಸಲಾಗಿದೆ ಎಂದು ತಿಳಿಸಿದರು.

ಕೇಂದ್ರಕ್ಕೆ ನಿಯೋಗ: ಕೇಂದ್ರ ಸರಕಾರ ಬಿಡುಗಡೆ ಮಾಡದೆ ಬಾಕಿ ಉಳಿದಿರುವ ಅನುದಾನ ಬಿಡುಗಡೆ ಮಾಡುವಂತೆ ಸದ್ಯದಲ್ಲೇ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರ ಬಳಿ ನಿಯೋಗ ಕೊಂಡೊಯ್ಯಲಾಗುವುದು. ಈ ವರ್ಷ ಬಾಕಿ ಉಳಿದಿರುವ ಹಣವನ್ನು ಕೇಂದ್ರ ಸರಕಾರ ಬಿಡುಗಡೆ ಮಾಡಲು ವಿಳಂಬ ಮಾಡಿದರೆ ರಾಜ್ಯ ಸರಕಾರದಿಂದಲೇ ಪಾವತಿ ಮಾಡಲು ಚಿಂತಿಸಲಾಗುತ್ತಿದೆ. ಆದರೆ, ರಾಜ್ಯ ಸರಕಾರ ಪಾವತಿ ಮಾಡುವ ಹಣ ಕೇಂದ್ರ ಸರಕಾರದಿಂದ ದೊರೆಯಬೇಕು ಎಂದು ಅವರು ಹೇಳಿದರು.

ನರೇಗಾ ಯೋಜನೆಯಡಿ ಕೆರೆಗಳ ಹೂಳೆತ್ತುವ, ಚೆಕ್‍ಡ್ಯಾಮ್ ನಿರ್ಮಾಣ, ಕಾಲುವೆ ನಿರ್ಮಾಣ, ಕಾಂಕ್ರಿಟ್ ರಸ್ತೆ ನಿರ್ಮಾಣ, ಕೃಷಿ ಹೊಂಡ, ದನದ ಕೊಟ್ಟಿಗೆ, ರೇಷ್ಮೆ ತೋಟಗಾರಿಕೆಗೂ ಬಳಸಬಹುದಾಗಿದೆ. ಸಮುದಾಯ ಆಧಾರಿತ ಕಾಮಗಾರಿಗಳಿಗೆ ಆದ್ಯತೆ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕೃಷ್ಣ ಭೈರೇಗೌಡ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News