ಆ್ಯಂಬಿಡೆಂಟ್ ವಂಚನೆ ಪ್ರಕರಣ: ತನಿಖಾಧಿಕಾರಿಯನ್ನೆ ಸಾಕ್ಷಿದಾರರನ್ನಾಗಿ ಪರಿಗಣಿಸಲು ಒತ್ತಾಯ

Update: 2018-12-20 15:58 GMT

ಬೆಂಗಳೂರು, ಡಿ.20: ಆ್ಯಂಬಿಡೆಂಟ್ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ತನಿಖಾಧಿಕಾರಿ ಎಸಿಪಿ ವೆಂಕಟೇಶ್ ಪ್ರಸನ್ನ ಅವರನ್ನೆ ಪ್ರಮುಖ ಸಾಕ್ಷಿದಾರರನ್ನಾಗಿ ಪರಿಗಣಿಸಬೇಕೆಂದು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಒತ್ತಾಯಿಸಿದ್ದಾರೆ.

ಗುರುವಾರ ನಗರದ ಚಾಮರಾಜಪೇಟೆಯ ಸಿಸಿಬಿ ಕೇಂದ್ರ ಕಚೇರಿಗೆ ಭೇಟಿ ನೀಡಿದ ಅವರು, ವಂಚನೆ ಪ್ರಕರಣ ಸಂಬಂಧ ಪ್ರಮುಖ ವ್ಯಕ್ತಿಯೊಬ್ಬರನ್ನು ಸಾಕ್ಷಿಯಾಗಿ ಪರಿಗಣಿಸಬೇಕೆಂದು ಕೋರಿ, ಸಿಸಿಬಿ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಆರಂಭ ದಿನಗಳಲ್ಲಿ ಪ್ರಕರಣದ ತನಿಖಾಧಿಕಾರಿಯಾಗಿದ್ದ ವೆಂಕಟೇಶ್ ಪ್ರಸನ್ನ ಅವರು ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್.ರಾಜು ಅವರಿಗೆ ಬರೆದಿದ್ದ ಪತ್ರದಲ್ಲಿ ರಾಜಕಾರಣಿಗಳು ಹಣ ಪಡೆದಿದ್ದಾರೆಂದು ಆರೋಪಿಸಿದ್ದರು. ಆದರೆ, ಇದುವರೆಗೂ ಯಾರ ವಿರುದ್ಧವೂ ಕ್ರಮಕೈಗೊಂಡಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಪ್ರಕರಣದಲ್ಲಿ ವೆಂಕಟೇಶ್ ಪ್ರಸನ್ನ ಅವರನ್ನು ಸಾಕ್ಷಿದಾರರನ್ನಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕು. ಅವರು ಸುಳ್ಳು ಹೇಳಿದ್ದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಪ್ರಕರಣದ ತನಿಖಾಧಿಕಾರಿ ಬಾಲರಾಜ್ ಅವರಿಗೆ ಪತ್ರ ಬರೆದಿದ್ದೇನೆ ಎಂದು ಅವರು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News