ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಶಾಸಕ ರಾಜೇಗೌಡ ನೇಮಕ

Update: 2018-12-22 16:14 GMT

ಚಿಕ್ಕಮಗಳೂರು, ಡಿ.22: ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಅವರನ್ನು ಮಲೆನಾಡು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶಿಸಿದೆ. 

ಪ್ರಾಧಿಕಾರದ ಈ ಹಿಂದಿನ ಅಧ್ಯಕ್ಷರಾಗಿ ಎಚ್.ಪಿ.ಮೋಹನ್ ಅವರು ಕಾರ್ಯನಿರ್ವಹಿಸಿದ್ದರು. ಅವರ ಅಧಿಕಾರವಧಿ ಮುಗಿದ ಹಿನ್ನೆಲೆಯಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ ಸುಮಾರು 20 ಮುಖಂಡರ ಹೆಸರುಗಳನ್ನು ಶಿಫಾರಸು ಮಾಡಿದೆ ಎನ್ನಲಾಗಿದ್ದು, ಪ್ರಾಧಿಕಾರದ ಅಧ್ಯಕ್ಷರ ಸ್ಥಾನಕ್ಕೆ ಚಿಕ್ಕಮಗಳೂರು ಜಿಲ್ಲೆಯಲ್ಲಿನ ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಪಕ್ಷದಿಂದ ಶೃಂಗೇರಿ ಕ್ಷೇತ್ರದಲ್ಲಿ ಚುನಾಯಿತರಾಗಿದ್ದ ಪಕ್ಷದ ಏಕೈಕ ಶಾಸಕ ಟಿ.ಡಿ.ರಾಜೇಗೌಡ ಅವರ ಹೆಸರನ್ನು ಶಿಫಾರಸು ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಶನಿವಾರ ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರನ್ನಾಗಿ ರಾಜೇಗೌಡ ಅವರನ್ನು ನೇಮಕ ಮಾಡಿ ಆದೇಶಿಸಿದ್ದಾರೆಂದು ತಿಳಿದು ಬಂದಿದೆ.

ರಾಜೇಗೌಡ ಅವರು ಚಿಕ್ಕಮಗಳೂರು ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಮುಖಂಡರಾಗಿದ್ದು, ಈ ಹಿಂದೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ರಾಜೇಗೌಡ ಅವರ ನೇಮಕಾತಿ ಆದೇಶ ಹೊರಬೀಳುತ್ತಿದ್ದಂತೆ ಜಿಲ್ಲಾ ಕಾಂಗ್ರೆಸ್‍ನಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News