×
Ad

ಹೈಕೋರ್ಟ್ ಆದೇಶ ಪ್ರಶ್ನಿಸಿ ಬಿಜೆಪಿ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

Update: 2018-12-24 16:53 IST

ಹೊಸದಿಲ್ಲಿ, ಡಿ.24: ಪಶ್ಚಿಮ ಬಂಗಾಳದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ ‘ಪ್ರಜಾಪ್ರಭುತ್ವ ಉಳಿಸಿ’ ಯಾತ್ರೆಗಳನ್ನು ಮುಂದೂಡುವಂತೆ ಸೂಚಿಸಿರುವ ಕಲ್ಕತ್ತಾ ಹೈಕೋರ್ಟ್‌ನ ಆದೇಶದ ವಿರುದ್ಧ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆ ನಡೆಸಬೇಕೆಂಬ ಬಿಜೆಪಿ ಮನವಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ.

  ಬಿಜೆಪಿ ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಲಾಗಿದೆ. ಯಥಾಪ್ರಕಾರ ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು. ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ನ ನೋಂದಣಿ ಕಚೇರಿಯ ಅಧಿಕಾರಿಗಳು ತಿಳಿಸಿರುವುದಾಗಿ ವಕೀಲರು ಹೇಳಿದ್ದಾರೆ. ಡಿ.24ರಿಂದ ಕೋರ್ಟ್‌ಗೆ ಚಳಿಗಾಲದ ರಜೆಯಿದೆ.

ರಾಜ್ಯದ ಮೂರು ಕಡೆಯಿಂದ ಯಾತ್ರೆ ಆರಂಭಿಸಿ ಕೋಲ್ಕತಾದಲ್ಲಿ ಸಭೆ ಆಯೋಜಿಸಲು ಬಿಜೆಪಿ ಯೋಜನೆ ಹಾಕಿಕೊಂಡಿದ್ದು ಇದಕ್ಕೆ ಪಕ್ಷದ ಅಧ್ಯಕ್ಷ ಅಮಿತ್ ಶಾ ಚಾಲನೆ ನೀಡುವರಿದ್ದರು. ಆದರೆ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗಲಿದೆ ಎಂಬ ಕಾರಣಕ್ಕೆ ಪಶ್ಚಿಮ ಬಂಗಾಳ ಸರಕಾರ ಅನುಮತಿ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಬಿಜೆಪಿ ಕಲ್ಕತ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಹೈಕೋರ್ಟ್‌ನ ಏಕಸದಸ್ಯ ಪೀಠ ರಾಜ್ಯ ಸರಕಾರದ ನಿರ್ಧಾರವನ್ನು ಬದಿಗೊತ್ತಿ ಯಾತ್ರೆಗೆ ಅನುಮತಿ ನೀಡಿತ್ತು.

ಇದರ ವಿರುದ್ಧ ಮಮತಾ ಬ್ಯಾನರ್ಜಿ ಸರಕಾರ ಹೈಕೋರ್ಟ್‌ನ ವಿಭಾಗೀಯ ಪೀಠದ ಮೆಟ್ಟಿಲೇರಿದ್ದರು. ರಾಜ್ಯ ಸರಕಾರದ ಅರ್ಜಿಯ ವಿಚಾರಣೆ ನಡೆಸಿದ್ದ ವಿಭಾಗೀಯ ಪೀಠದ ನ್ಯಾಯಾಧೀಶರು ಏಕಸದಸ್ಯ ಪೀಠದ ಆದೇಶವನ್ನು ರದ್ದುಗೊಳಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News