ಕೇಂದ್ರ ಸಚಿವ ನಿತಿನ್ ಗಡ್ಕರಿಯನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

Update: 2018-12-26 14:37 GMT
ಫೈಲ್ ಚಿತ್ರ

ಹೊಸದಿಲ್ಲಿ, ಡಿ.26: ಹುಬ್ಬಳ್ಳಿ ಧಾರವಾಡ ಅವಳಿ ನಗರಗಳ ನಡುವೆ ಎಲಿವೇಟೆಡ್ ರಸ್ತೆ ನಿರ್ಮಿಸುವ ಕುರಿತು ಕೇಂದ್ರ ಭೂ ಸಾರಿಗೆ, ಹೆದ್ದಾರಿ ಮತ್ತು ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಸಮ್ಮತಿಸಿದ್ದು, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿದ ಕೂಡಲೇ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬುಧವಾರ ಕೇಂದ್ರ ಭೂ ಹೆದ್ದಾರಿ ಮತ್ತು ಜಲ ಸಂಪನ್ಮೂಲ ಸಚಿವ ನಿತಿನ್ ಗಡ್ಕರಿಯನ್ನು ಭೇಟಿ ಮಾಡಿ ರಾಜ್ಯದ ವಿವಿಧ ಹೆದ್ದಾರಿಗಳ ಅಭಿವೃದ್ಧಿ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ, ಗೋವಾ ರಾಜ್ಯಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 4 ಎ ಪ್ರಸ್ತುತ ಎರಡು ಪಥಗಳದ್ದಾಗಿದ್ದು ಇದರ ಅಗಲೀಕರಣಕ್ಕಾಗಿ ಮುಂದಿನ 18 ತಿಂಗಳ ಕಾಲ ಬಂದ್ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಳಸಬಹುದಾದ ಪರ್ಯಾಯ ಸಂಪರ್ಕ ಮಾರ್ಗಗಳ ಅಭಿವೃದ್ಧಿಯನ್ನು ಈ ಯೋಜನೆಯಡಿಯಲ್ಲಿಯೇ ಕೈಗೆತ್ತಿಕೊಳ್ಳುವಂತೆ ನಿತಿನ್ ಗಡ್ಕರಿಗೆ ಮುಖ್ಯಮಂತ್ರಿ ಮನವಿ ಮಾಡಿದರು.

ಇದಲ್ಲದೆ, ಬೇಲೂರು-ಹಾಸನ ನಡುವೆ ರಾಷ್ಟ್ರೀಯ ಹೆದ್ದಾರಿ 373ರ ಅಭಿವೃದ್ಧಿ, ಹಾಸನ-ಹೊಳೆನರಸೀಪುರ ಚತುಷ್ಪಥ ರಸ್ತೆ, ಚನ್ನರಾಯಪಟ್ಟಣ- ಹೊಳೆನರಸೀಪುರ- ಅರಕಲಗೂಡು-ಕೊಡ್ಲಿಪೇಟೆ-ಮಡಿಕೇರಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸುವ ಬಗ್ಗೆ ಈ ಸಂದರ್ಭದಲ್ಲಿ ಚರ್ಚಿಸಲಾಯಿತು.

ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News