ರಸ್ತೆಯಲ್ಲೇ ಶವಸಂಸ್ಕಾರ !
Update: 2018-12-31 23:52 IST
ಶವಸಂಸ್ಕಾರಕ್ಕೆ ಜಾಗವಿಲ್ಲದ ಕಾರಣ ಕುಟುಂಬಸ್ಥರು ರಸ್ತೆಯಲ್ಲೇ ಶವ ಸಂಸ್ಕಾರ ಮಾಡಿದ ಘಟನೆ ಗದಗ ತಾಲೂಕಿನ ಹಾತಲಗೇರಿ ಗ್ರಾಮದಲ್ಲಿ ನಡೆದಿದೆ. ಈ ಗ್ರಾಮದಲ್ಲಿ ಹಲವು ವರ್ಷಗಳಿಂದ ಸ್ಮಶಾನಕ್ಕೆ ಜಾಗವಿಲ್ಲದೆ ಗ್ರಾಮಸ್ಥರು ಪರಿತಪಿಸುತ್ತಿದ್ದಾರೆ. ಇದಕ್ಕಾಗಿ ಹಲವು ಬಾರಿ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದರೂ, ಜಿಲ್ಲಾಡಳಿತ ಕ್ಯಾರೆ ಎನ್ನುತ್ತಿಲ್ಲ. ಇದರಿಂದ ಬೇಸತ್ತ ಸ್ಥಳೀಯರು ಹಾತಲಗೇರಿ ಗ್ರಾಮದ ನಾಗಸಮುದ್ರ ರಸ್ತೆಯಲ್ಲಿ ಶವ ಸುಟ್ಟಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಗದಗ ನಗರ ತಹಶೀಲ್ದಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್‌ರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಹಾತಲಗೇರಿ ಗ್ರಾಮದ ಸಮಸ್ಯೆ ಬಗೆಹರಿಸುವಂತೆ ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ ಜೊತೆ ವಾಗ್ವಾದ ಮಾಡಿದ್ದಾರೆ. ಒಂದು ವೇಳೆ ಸಮಸ್ಯೆ ಬಗೆಹರಿಸದಿದ್ದರೆ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಶವ ಸುಡುತ್ತೇವೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.