ಗೌರಿ, ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆಗೆ ಶೀಘ್ರವೇ ತಾರ್ಕಿಕ ಅಂತ್ಯ: ಗೃಹ ಸಚಿವ ಎಂ.ಬಿ.ಪಾಟೀಲ್

Update: 2019-01-02 13:22 GMT

ಬೆಂಗಳೂರು, ಜ. 2: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ಸಂಶೋಧಕ ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣಗಳಿಗೆ ಸಂಬಂದಿಸಿದಂತೆ ತನಿಖೆ ಪ್ರಗತಿಯಲ್ಲಿದ್ದು, ಎರಡು ಪ್ರಕರಣಗಳು ಅದಷ್ಟು ಬೇಗ ತಾರ್ಕಿಕ ಅಂತ್ಯಕ್ಕೆ ಬರುವ ವಿಶ್ವಾಸವಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಭರವಸೆ ವ್ಯಕ್ತಪಡಿಸಿದ್ದಾರೆ.

ಬುಧವಾರ ವಿಧಾನಸೌಧದ ಮೂರನೆ ಮಹಡಿಯಲ್ಲಿನ ಸಮಿತಿ ಕೊಠಡಿಯಲ್ಲಿ ಗೃಹ ಇಲಾಖೆ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ, ಇಲಾಖೆ ಸಮಸ್ಯೆಗಳು ಹಾಗೂ ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದರು.

ಅನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂ.ಬಿ.ಪಾಟೀಲ್ ಅವರು, ಗೌರಿ ಲಂಕೇಶ್ ಹಾಗೂ ಎಂ.ಎಂ.ಕಲಬುರ್ಗಿ ಹತ್ಯೆ ಸೇರಿದಂತೆ ಎರಡೂ ಪ್ರಕರಣಗಳ ಬಗ್ಗೆಯೂ ಇಲಾಖೆ ತನಿಖಾಧಿಕಾರಿಗಳು ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.

ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಕ್ರಮ: ಅಪರಾಧ ಪ್ರಕರಣಗಳ ಇಳಿಕೆ, ಮಾದಕ ವಸ್ತುಗಳ ನಿಯಂತ್ರಣ ಹಾಗೂ ನಗರದ ಸಂಚಾರ ದಟ್ಟಣೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಪಾಟೀಲ್ ಇದೇ ವೇಳೆ ಅಧಿಕಾರಿಗಳು ನಿರ್ದೇಶನ ನೀಡಿದರು.

ರಾಜ್ಯದಲ್ಲಿನ ಅಪರಾಧ ಪ್ರಕರಣಗಳನ್ನು ತಡೆಗಟ್ಟುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇಲಾಖೆಗೆ ಸಂಬಂಧಿಸಿದ ಕೆಲ ಯೋಜನೆಗಳು ಆರ್ಥಿಕ ಇಲಾಖೆಯಲ್ಲಿ ಬಾಕಿ ಇವೆ ಹಾಗೂ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗಳಿಗೆ ವಸತಿ ಸೌಲಭ್ಯ ಸೇರಿದಂತೆ ಅವರ ಜೀವನಮಟ್ಟ ಸುಧಾರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಅಕ್ರಮ ವಲಸಿಗರೆಂದು ರಾಜ್ಯದಲ್ಲಿ 113 ಜನರನ್ನು ಈಗಾಗಲೇ ಗುರುತಿಸಲಾಗಿದೆ. ಅಕ್ರಮ ವಲಸಿಗರ ಬಗ್ಗೆ ನಿಗಾವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಪರಾಧಿಗಳನ್ನು ಯಾವುದೇ ಜಾತಿ ಧರ್ಮದವರೆಂದು ಗುರುತಿಸುವುದು ಸರಿಯಲ್ಲ ಎಂದು ಅವರು ಹೇಳಿದರು.

ಪೊಲೀಸ್ ಸಿಬ್ಬಂದಿಗಳ ಜೀವನ ಮಟ್ಟ ಸುಧಾರಿಸುವ ಸಂಬಂಧ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು. ರಾಘವೇಂದ್ರ ಔರಾದ್‌ಕರ್ ವರದಿ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ವರದಿ ತರಿಸಿ ನೋಡುತ್ತೇನೆ. ಅವರ ನಂತರ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇಲಾಖೆಯ ಕೆಲವು ವಿಭಾಗಗಳ ಬಗ್ಗೆ ಮಾತ್ರ ಮಾಹಿತಿ ಪಡೆಯಲಾಗಿದ್ದು, ಮುಂದಿನ ವಾರ ಉಳಿದ ವಿಭಾಗಳ ಬಗ್ಗೆ ಮಾಹಿತಿ ಪಡೆದು ಇಲಾಖೆಯ ಒಟ್ಟಾರೆ ಪ್ರಗತಿಯ ಬಗ್ಗೆ ಮಾಹಿತಿ ಒದಗಿಸಲಾಗುವುದು, ಇಲಾಖೆಯಲ್ಲಿ ಉತ್ತಮ ಅಧಿಕಾರಿಗಳಿದ್ದಾರೆ. ಅವರನ್ನು ಗುರುತಿಸಿ ಪ್ರೋತ್ಸಾಹಿಸುವ ಅಗತ್ಯವಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News