×
Ad

ಜ.8-9ರ ಮುಷ್ಕರಕ್ಕೆ ಜೆಎಂಎಸ್, ಬಿಎಸ್‌ಎನ್‌ಎಲ್ ಗುತ್ತಿಗೆ ಕಾರ್ಮಿಕರ ಬೆಂಬಲ

Update: 2019-01-02 20:11 IST

ಮಂಗಳೂರು, ಜ.2: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜ.8ಮತ್ತು 9ರಂದು ರಾಷ್ಟ್ರವ್ಯಾಪಿ ನಡೆಯುವ ಮುಷ್ಕರವನ್ನು ಬೆಂಬಲಿಸಲು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ದ.ಕ. ಜಿಲ್ಲಾ ಸಮಿತಿಯು ಬೆಂಬಲ ವ್ಯಕ್ತಪಡಿಸಿದೆ.

ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷೆ ಜಯಂತಿ ಬಿ.ಶೆಟ್ಟಿಯ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಕಳೆದ ನಾಲ್ಕುವರೆ ವರ್ಷಗಳಿಂದ ಆಡಳಿತ ನಡೆಸುವ ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರವು ಮಹಿಳಾ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಸಂಸದೀಯ ಪ್ರಜಾಪ್ರಭುತ್ವದಲ್ಲಿ ಶೇ.33 ಮಹಿಳಾ ಪ್ರಾತಿನಿಧ್ಯಕ್ಕೆ ಮೀಸಲಾತಿ ನೀಡಬೇಕು ಎಂಬ ಮಸೂದೆ ನನೆಗುದಿಗೆ ಬಿದ್ದಿವೆ. ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಪ್ರದೇಶಗಳಿಗೂ ವಿಸ್ತರಿಸಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ದುಡಿಮೆಯ ಸ್ಥಳಗಳಲ್ಲಿ ಶಿಶುಪಾಲನಾ ಕೇಂದ್ರಗಳ ವ್ಯವಸ್ಥೆ ಮಾಡಬೇಕು, ದೇಶಾದ್ಯಂತ ಮಹಿಳೆಯರ ಮೇಲೆ ನಡೆಯುವ ಎಲ್ಲಾ ರೀತಿಯ ದೌರ್ಜನ್ಯಗಳನ್ನು ತಡೆಗಟ್ಟಿ ಮಹಿಳೆಯರ ಸುರಕ್ಷತೆಯ ಬಗ್ಗೆ ಖಾತರಿ ನೀಡಬೇಕು, ತಿಂಗಳಿಗೆ 18,000 ರೂ. ಕನಿಷ್ಟ ಕೂಲಿ ಜಾರಿಗೊಳಿಸಬೇಕು ಎಂದು ಸಭೆ ಆಗ್ರಹಿಸಿದೆ. ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ರಾಧಾ ಮತ್ತಿತರರು ಪಾಲ್ಗೊಂಡಿದ್ದರು.

ಎಸ್‌ಎನ್‌ಎಲ್ ಗುತ್ತಿಗೆ ಕಾರ್ಮಿಕರ ಬೆಂಬಲ

 ಬಿಎಸ್‌ಎನ್‌ಎಲ್ ಎಕ್ಸ್‌ಚೇಂಜ್ ಹಾಗೂ ಕಚೇರಿಗಳಲ್ಲಿ ದುಡಿಯುವ ಗುತ್ತಿಗೆ ಕಾರ್ಮಿಕರನ್ನು ದುಡಿಸಿ ಕಳೆದ 3 ತಿಂಗಳ ವೇತನವನ್ನು ನೀಡದಿರುವುದು, ಸಮಾನ ಕೆಲಸಕ್ಕೆ ಸಮಾನ ವೇತನ ನೀಡದಿರುವುದು, ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಬೇಕು, ಗುತ್ತಿಗೆ ಕಾರ್ಮಿಕರಿಗೆ ಮಾಸಿಕ 18,000 ರೂ. ಕನಿಷ್ಟ ವೇತನ ನೀಡಬೇಕು, ಸಾಮಾಜಿಕ ಭದ್ರತೆಯನ್ನು ನೀಡಬೇಕು, ಗುತ್ತಿಗೆ ಕಾರ್ಮಿಕರಿಗೆ ಕೆಲಸದ ಭದ್ರತೆ ನೀಡಬೇಕು ಎಂದು ಒತ್ತಾಯಿಸಿ ಜ.8,9ರಂದು ನಡೆಯುವ ಅಖಿಲ ಭಾರತ ಮುಷ್ಕರದಲ್ಲಿ ಬಿಎಸ್‌ಎನ್‌ಎಲ್ ನಾನ್ ಪರ್ಮನೆಂಟ್ ವರ್ಕರ್ಸ್ ಯೂನಿಯನ್ (ರಿ) ಸಿಐಟಿಯು ಕರೆಯನ್ವಯ ದ.ಕ. ಜಿಲ್ಲೆಯ ಬಿಎಸ್‌ಎನ್‌ಎಲ್‌ನಲ್ಲಿ ದುಡಿಯುವ ಗುತ್ತಿಗೆ ಕಾರ್ಮಿಕರು ಭಾಗವಹಿಸಿ ಬೆಂಬಲಿಸಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ವಸಂತ ಆಚಾರಿ, ಕಾರ್ಯದರ್ಶಿ ಉದಯ ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News