×
Ad

ಅಲೆಮಾರಿ ಜನಾಂಗಗಳ ಅಭಿವೃದ್ಧಿಗೆ ಶಿಕ್ಷಣ-ಉದ್ಯಮಶೀಲತೆಗೆ ಒತ್ತು: ಸಚಿವ ಪ್ರಿಯಾಂಕ್ ಖರ್ಗೆ

Update: 2019-01-02 21:35 IST

ಬೆಂಗಳೂರು, ಜ. 2: ಸಮಾಜದಲ್ಲಿ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಅಲೆಮಾರಿ ಜನಾಂಗಳ ಅಭಿವೃದ್ಧಿಗೆ ಸರಕಾರ ಬದ್ಧವಾಗಿದ್ದು, ಶಿಕ್ಷಣ ಹಾಗೂ ಉದ್ಯಮಶೀಲತೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಅಲೆಮಾರಿ ಜನಾಂಗಗಳ ಪ್ರಗತಿಗೆ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ ರಾಜ್ಯ ಅಲೆಮಾರಿ ಜನಾಂಗಗಳ ಸಮುದಾಯ ಮುಖಂಡರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಆಶಕ್ತ ಸಮುದಾಯದ ಹಿತದೃಷ್ಟಿಯಿಂದ ಸಮೃದ್ಧಿ, ಉನ್ನತಿ, ಐರಾವತ, ಪ್ರಬುದ್ಧ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.

ಅಲೆಮಾರಿ ಸಮುದಾಯದ ಜನಾಂಗದ ನಿವೇಶನ ರಹಿತರಿಗೆ ನಿವೇಶನಗಳನ್ನು ನೀಡಲು ಅವಶ್ಯವಿದ್ದಲ್ಲಿ ವಿಶೇಷ ಕಾರ್ಯಕ್ರಮ ಹಾಕಿಕೊಳ್ಳಲಾಗುವುದು ಎಂದ ಅವರು, ಭೂ ಒಡೆತನ ಕಾರ್ಯಕ್ರಮದಡಿ ಅರ್ಹ ಅಲೆಮಾರಿ ಜನಾಂಗಗಳಿಗೆ ಭೂಮಿ ಕೊಂಡುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.

ಅಲೆಮಾರಿ ಜನಾಂಗದ ಕೆಲವು ಜಾತಿಗಳು ಜಾತಿ ದೃಢೀಕರಣ ಪತ್ರ ಪಡೆಯುವಲ್ಲಿ ಆಗಿರಬಹುದಾದ ತೊಂದರೆಗಳನ್ನು ನಿವಾರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಅಲೆಮಾರಿ ಜನಾಂಗಗಳಲ್ಲಿ ಮಾತ್ರ ಉಳಿದುಕೊಂಡಿರುವ ಹಲವಾರು ಕಲೆಗಳನ್ನು ಉಳಿಸಿಕೊಳ್ಳುವ ಸಲುವಾಗಿ ಹಾಗೂ ಅಲೆಮಾರಿ ಜನಾಂಗಗಳ ಅಧ್ಯಯನಕ್ಕಾಗಿ ಬೆಂಗಳೂರು ಸೇರಿದಂತೆ ಅವಶ್ಯವಿರುವ ಜಿಲ್ಲಾ ಕೇಂದ್ರಗಳಲ್ಲಿ ಅಧ್ಯಯನ ಕೇಂದ್ರಗಳನ್ನು ಸ್ಥಾಪಿಸಲು ಯೋಜನೆ ಹಮ್ಮಿಕೊಳ್ಳಲಾಗುವುದು ಎಂದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್, ಸಲಹೆಗಾರ ಇ.ವೆಂಕಟಯ್ಯ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸುಲು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಸಂಗಪ್ಪ ಸೇರಿದಂತೆ ಅಧಿಕಾರಿಗಳು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News