ತುಮಕೂರು: ಸಿರಿಧಾನ್ಯ ಮೇಳ ಕಾಲ್ನಡಿಗೆ ಜಾಥಾಕ್ಕೆ ಚಾಲನೆ

Update: 2019-01-02 18:31 GMT

ತುಮಕೂರು,ಜ.2: ನಗರದ ಗಾಜಿನ ಮನೆಯಲ್ಲಿ ಇದೇ 5 ಮತ್ತು 6 ರಂದು ನಡೆಯಲಿರುವ ಸಾವಯವ ಮತ್ತು ಸಿರಿಧಾನ್ಯ ಮೇಳದ ಬಗ್ಗೆ ನಾಗರಿಕರಿಗೆ ಅರಿವು ಮೂಡಿಸುವ ಸಲುವಾಗಿ ನಗರದಲ್ಲಿಂದು ಕಾಲ್ನಡಿಗೆ ಜಾಥಾ ನಡೆಯಿತು. 

ಬೆಳಿಗ್ಗೆ 6 ಗಂಟೆಗೆ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಿಂದ ಹೊರಟ ಈ ಕಾಲ್ನಡಿಗೆ ಜಾಥಾಕ್ಕೆ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. 

ನಂತರ ಮಾತನಾಡಿದ ಅವರು, ಸಿರಿಧಾನ್ಯಗಳನ್ನು ಬೆಳೆಯುವ ಬಗ್ಗೆ ಮತ್ತು ಇದರಲ್ಲಿರುವ ಪೋಷಕಾಂಶಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ರಾಜ್ಯ ಸರ್ಕಾರ ಸಾವಯವ ಕೃಷಿ ಮತ್ತು ಸಿರಿಧಾನ್ಯ ಉತ್ಪನ್ನಗಳಿಗೆ ಅತಿ ಹೆಚ್ಚು ಒತ್ತು ನೀಡುತ್ತಿದೆ. ಈ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಸಲುವಾಗಿ ಸಿರಿಧಾನ್ಯ ಮೇಳಗಳನ್ನು ಆಯೋಜಿಸಲಾಗುತ್ತಿದೆ ಎಂದರು. 

ಸಿರಿಧಾನ್ಯಗಳನ್ನು ಆಹಾರದಲ್ಲಿ ಬಳಸಿದರೆ ಉತ್ತಮ ಆರೋಗ್ಯ ಪ್ರಾಪ್ತಿಯಾಗುತ್ತದೆ. ಹೀಗಾಗಿ ಪ್ರತಿಯೊಬ್ಬ ರೈತರು ಮತ್ತು ಜನಸಾಮಾನ್ಯರು ಸಿರಿಧಾನ್ಯ ಬಳಕೆಗೆ ಮುಂದಾಗಬೇಕು ಎಂದರು. ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯವನ್ನು ಸಿರಿಧಾನ್ಯ ರಾಜ್ಯವನ್ನಾಗಿ ಮಾರ್ಪಡಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದರು. 

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಯಸ್ವಾಮಿ ಮಾತನಾಡಿ, ಇದೇ ತಿಂಗಳ 5 ಮತ್ತು 6 ರಂದು ನಡೆಯಲಿರುವ ಸಾವಯವ ಮತ್ತು ಸಿರಿಧಾನ್ಯ ಮೇಳದಲ್ಲಿ ಜಿಲ್ಲೆಯ 10 ಮಂದಿ ಸಾವಯವ ರೈತರು ಮತ್ತು 100ಕ್ಕೂ ಹೆಚ್ಚು ಮಳಿಗೆಗಳು ಭಾಗವಹಿಸುವ ನಿರೀಕ್ಷೆ ಇದೆ. ಇದರ ಪ್ರಯೋಜನವನ್ನು ಜಿಲ್ಲೆಯ ರೈತರು, ಜನಸಾಮಾನ್ಯರು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.  

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಕೃಷಿ ಸಂಬಂಧಿತ ಇಲಾಖೆಗಳು ಹಾಗೂ ಪ್ರಾಂತೀಯ ಸಹಕಾರ ಸಾವಯವ ಕೃಷಿಕರ ಸಂಘದ ಒಕ್ಕೂಟದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಈ ಕಾಲ್ನಡಿಗೆ ಜಾಥಾವು ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಿಂದ ಹೊರಟು ಸೋಮೇಶ್ವರಪುರಂ ಮಾರ್ಗವಾಗಿ ದೋಬಿಘಾಟ್ ರಸ್ತೆ ಮೂಲಕ ಮಹಾತ್ಮಗಾಂಧಿ ಕ್ರೀಡಾಂಗಣ ತಲುಪಿತು.   

ಈ ಕಾಲ್ನಡಿಗೆ ಜಾಥಾದಲ್ಲಿ ಜಿ.ಪಂ. ಸಿಇಓ ಅನೀಸ್ ಕೆ. ಜಾಯ್, ಕೃಷಿ ಇಲಾಖೆ ಅಧಿಕಾರಿಗಳಾದ ಜಯಸ್ವಾಮಿ, ಉಮೇಶ್, ಪ್ರಾಂತೀಯ ಸಹಕಾರ ಸಾವಯವ ಕೃಷಿಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಗೋವಿಂದರಾಜು, ಅಶೋಕ್, ನಿರ್ಮಿತಿ ಕೇಂದ್ರದ ರಾಜಶೇಖರ್, ರಾಜಕುಮಾರ್, ಲೀಡ್ ಬ್ಯಾಂಕ್‍ನ ಜ್ಯೋತಿಗಣೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಜಿಲ್ಲೆಯ ಅಥ್ಲೆಟಿಕ್ ವಿದ್ಯಾರ್ಥಿಗಳು, ಶಾಲಾ ಮಕ್ಕಳು ಹಾಗೂ ನೂರಾರು ಮಂದಿ ರೈತರೊಂದಿಗೆ ಹೆಜ್ಜೆ ಹಾಕಿದರು.  

ಜಾಥಾದಲ್ಲಿ ಪಾಲ್ಗೊಂಡಿದ್ದ ಎಲ್ಲರಿಗೂ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News