×
Ad

ಪೊಲೀಸರು ಕಾರ್ಯದೊತ್ತಡದಿಂದ ಹೊರಬರಲು ಕ್ರೀಡಾಕೂಟ ಸಹಕಾರಿ: ನ್ಯಾ.ಉಮೇಶ್ ಅಡಿಗ

Update: 2019-01-03 20:23 IST

ಚಿಕ್ಕಮಗಳೂರು, ಜ.3: ಯುವ ಜನಾಂಗ ದೈಹಿಕ ಹಾಗೂ ಮಾನಸಿಕವಾಗಿ ಸದೃಢವಾಗಿದ್ದರೆ ಬಲಿಷ್ಠವಾದ ದೇಶ ಕಟ್ಟಲು ಸಾಧ್ಯ. ಈ ಹಿನ್ನೆಲೆಯಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಉತ್ತಮ ಆರೋಗ್ಯವನ್ನು ಹೊಂದಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಉಮೇಶ್ ಎಂ.ಅಡಿಗ ತಿಳಿಸಿದರು. 

ಗುರುವಾರ ನಗರದ ರಾಮನಹಳ್ಳಿ ಶಸಸ್ತ್ರ ಮೀಸಲು ಪಡೆಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ತ್ರಿವರ್ಣ ಬಲೂನುಗಳನ್ನು ಹಾರಿ ಬಿಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ಉತ್ತಮವಾಗಿದ್ದರೆ ಮಾತ್ರ ಆತ್ಮ ವಿಶ್ವಾಸ ಹೆಚ್ಚಾಗುತ್ತದೆ. ಈ ಕಾರಣಕ್ಕೆ ಪ್ರತಿಯೊಬ್ಬರೂ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಸೇರಿದಂತೆ ಇತರ ಸೌಕರ್ಯಗಳ ಕೊರತೆಗಳಿಂದಾಗಿ ಅಧಿಕಾರಿಗಳು ಹಾಗೂ ನೌಕರರು ತೀವ್ರ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಜನಸಂಖ್ಯೆ ಹೆಚ್ಚಿದಂತೆ ಅಪರಾಧ ಪ್ರಕರಣಗಳೂ ಹೆಚ್ಚಾಗುತ್ತದೆ ಅದನ್ನು ನಿಯಂತ್ರಿಸುವ ಜೊತೆಗೆ ಸಭೆ, ಸಮಾರಂಭ, ಕಾರ್ಯಕ್ರಮಗಳಿಗೆ ಸೂಕ್ತ ಭದ್ರತೆಯನ್ನೂ ಪೊಲೀಸರು ನೀಡಬೇಕಾಗುತ್ತದೆ. ಇಂತಹ ಸಂದರ್ಭದಲ್ಲಿ ಪೊಲೀಸರಲ್ಲಿ ಕಾರ್ಯದೊತ್ತಡ ಹೆಚ್ಚಾಗಿರುತ್ತದೆ. ಅದರಿಂದ ಹೊರಕ್ಕೆ ಬರಲು ಇಂತಹ ಕ್ರೀಡಾಕೂಟಗಳು ಅಗತ್ಯವಿದೆ ಎಂದರು.

ಪೊಲೀಸ್ ಇಲಾಖೆ ಹಾಗೂ ನ್ಯಾಯಾಂಗ ಇಲಾಖೆಗಳು ಸಹೋದರರಿದ್ದಂತೆ ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ವ್ಯವಸ್ಥಿತವಾಗಿ ನಡೆಸುವುದು ಪೊಲೀಸ್ ಇಲಾಖೆ. ಎರಡೂ ಇಲಾಖೆಗಳ ನಡುವೆ ಆತ್ಮೀಯತೆ ಮುಖ್ಯ. ಇದರಿಂದ ಸಮಾಜಕ್ಕೆ ನ್ಯಾಯ ಕೊಡಲು ಸಾಧ್ಯ ಎಂದು ಅಭಿಪ್ರಾಯಿಸಿದರು.

ಇದೇ ಸಂದರ್ಭದಲ್ಲಿ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜ ಚೇಂಗಟಿ ಮಾತನಾಡಿದರು. ಜಿಲ್ಲಾ ಪೊಲೀಸ್ ಅಧೀಕ್ಷಕ ಹರೀಶ್ ಪಾಂಡೆ ಸ್ವಾಗತಿಸಿದರು. ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಎನ್.ಎಸ್.ಚಂದ್ರಶೇಖರ್ ಉಪಸ್ಥಿತರಿದ್ದರು.

ಕ್ರೀಡಾಕೂಟದಲ್ಲಿ ಭಾಗವಹಿಸಿದ ಪೊಲೀಸ್ ಸಿಬ್ಬಂದಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಓಟದ ಸ್ಪರ್ಧೆ, ಹಗ್ಗ ಜಗ್ಗಾಟ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News