ಎಸ್ಸಿ-ಎಸ್ಟಿ ಆರ್ಥಿಕ ಸಬಲೀಕರಣಕ್ಕೆ ಕ್ರಮವಹಿಸಿ: ಸಚಿವ ಪ್ರಿಯಾಂಕ್ ಖರ್ಗೆ

Update: 2019-01-04 16:50 GMT

ಬೆಂಗಳೂರು, ಜ. 4: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆಗೆ ಅನುಸಾರವಾಗಿ ಎಸ್ಸಿಪಿ-ಟಿಎಸ್ಪಿ ಅನುದಾನವನ್ನು ಎಸ್ಸಿ-ಎಸ್ಟಿ ವರ್ಗದ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ, ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶುಕ್ರವಾರ ವಿಕಾಸಸೌಧದಲ್ಲಿನ ತನ್ನ ಕೊಠಡಿಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಮುಂದಿನ ಹಣಕಾಸು ವರ್ಷದಲ್ಲಿ ಸರಕಾರದ ವಿವಿಧ ಇಲಾಖೆಗಳಲ್ಲಿ ಹಮ್ಮಿಕೊಳ್ಳಲಾಗುವ ಕಾರ್ಯಕ್ರಮಗಳ ಸ್ವರೂಪವನ್ನು ಬದಲಿಸಿ, ಎಸ್ಸಿ-ಎಸ್ಟಿಗಳ ಆರ್ಥಿಕವಾಗಿ ಸದೃಢರಾಗುವಂತಹ ವಿನೂತನ ಯೋಜನೆಗಳನ್ನು ಅನುಷ್ಠಾನಕ್ಕೆ ತರಬೇಕೆಂದು ಸಲಹೆ ಮಾಡಿದರು.

ಪ್ರಗತಿಯಲ್ಲಿ ಕೊರತೆಯಿರುವ ಇಲಾಖೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಾದ ಸೂಚನೆಗಳನ್ನು ನೀಡಿದ ಅವರು, ಪ್ರತಿಯೊಂದು ಇಲಾಖೆಯಲ್ಲಿ ಎಸ್ಸಿಪಿ-ಟಿಎಸ್ಪಿ ಯೋಜನೆ ಪಾರದರ್ಶಕತೆ ಮತ್ತು ಉತ್ತರದಾಯಿತ್ವದ ಮೇಲ್ವಿಚಾರಣೆ ಅಧಿಕಾರಿಗಳ ಜವಾಬ್ದಾರಿಯಾಗಿದ್ದು, ತಮ್ಮ ಕರ್ತವ್ಯ ನಿರ್ಲಕ್ಷಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. 2019ರ ಮಾರ್ಚ್ ಅಂತ್ಯದೊಳಗೆ ಸಂಪೂರ್ಣ ಕಾರ್ಯಗತಗೊಳಿಸಬೇಕು ಎಂದು ಹೇಳಿದರು.

ಎಸ್ಸಿ-ಎಸ್ಟಿ ಜನಸಂಖ್ಯೆಗೆ ಅನುಗುಣವಾಗಿ ಎಸ್ಸಿಪಿ-ಟಿಎಸ್ಪಿ ಯೋಜನೆಯಡಿ ಬಜೆಟ್‌ನಲ್ಲಿ ಶೇ.24.10ರಷ್ಟು ಮೊತ್ತದ ಅನುದಾನವನ್ನು ಹಂಚಿಕೆ ಮಾಡಿ ಈ ಜನರ ಅಭಿವೃದ್ಧಿಗಾಗಿ ಅನುಕೂಲವಾಗುವಂತೆ ಹಾಗೂ ಅನುದಾನದ ಸಮರ್ಪಕ ಬಳಕೆಗಾಗಿ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಅಧಿನಿಯಮ 2013ನ್ನು ಸರಕಾರ ಜಾರಿಗೆ ತಂದಿದೆ.

ಈ ಮೇಲ್ಕಂಡ ನಿಯಮದಡಿ ಸರಕಾರದ ಪ್ರತಿಯೊಂದು ಇಲಾಖೆಯೂ ಎಸ್ಸಿ-ಎಸ್ಟಿ ಅಭಿವೃದ್ಧಿಗಾಗಿ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News