ಉತ್ತರ ಕರ್ನಾಟಕ ಭಾಗಕ್ಕೆ 9 ಸರಕಾರಿ ಕಚೇರಿ ಸ್ಥಳಾಂತರ: ಎಚ್.ಡಿ.ಕುಮಾರಸ್ವಾಮಿ

Update: 2019-01-04 16:52 GMT

ಧಾರವಾಡ, ಜ.4: ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಸರಕಾರ ಬದ್ಧವಾಗಿದ್ದು, 9 ಸರಕಾರಿ ಕಚೇರಿಗಳನ್ನು ಈ ಭಾಗಕ್ಕೆ ಸ್ಥಳಾಂತರಿಸಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಏರ್ಪಡಿಸಿರುವ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಯಾವುದೇ ತಾರತಮ್ಯವೆಸಗದೆ ಇಡೀ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರಕಾರ ಪ್ರಯತ್ನಿಸುತ್ತಿದೆ. ಈ ಭಾಗದ ಜನರಿಗೆ ಕುಡಿಯುವ ನೀರು ಪೂರೈಸುವ ಯೋಜನೆಯ ಅನುಷ್ಠಾನಕ್ಕೆ ಸರ್ಕಾರ ಆದ್ಯತೆ ನೀಡಿದೆ ಎಂದು ತಿಳಿಸಿದರು. 

ಕೇಂದ್ರ ಸರಕಾರದೊಂದಿಗೆ ಸಮನ್ವಯದಿಂದ ಹೆಚ್ಚಿನ ನೆರವು ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದಾಗ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವಂತೆ ಮನವಿ ಮಾಡಲಾಗಿದೆ. ಮಹದಾಯಿ ನ್ಯಾಯಾಧೀಕರಣದ ನೀರು ಹಂಚಿಕೆ ತೀರ್ಪಿನ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಮನವಿ ಮಾಡಲಾಗಿದೆ ಎಂದು ಅವರು ಹೇಳಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರಿಡುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿದೆ. ಕಲಬುರಗಿ ಮತ್ತು ಬೀದರ್ ವಿಮಾನ ನಿಲ್ದಾಣ ಕಾರ್ಯಾರಂಭಕ್ಕೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಹಾಗೂ ವಿಮಾನ ನಿಲ್ದಾಣ ಪ್ರಾಧಿಕಾರದ ಅನುಮೋದನೆಗೆ ಪ್ರಯತ್ನಿಸಲಾಗಿದೆ ಎಂದು ಕುಮಾರಸ್ವಾಮಿ ಮಾಹಿತಿ ನೀಡಿದರು.

ವಿಜಯಪುರ, ಕಾರವಾರಗಳಲ್ಲಿ ವಿಮಾನ ನಿಲ್ದಾಣ ನಿರ್ಮಿಸುವ ಉದ್ದೇಶವನ್ನು ಸರಕಾರ ಹೊಂದಿದೆ. ಇದರಿಂದ ಈ ಭಾಗದ ಉದ್ಯಮ, ವ್ಯವಹಾರಗಳಿಗೆ ಅನುಕೂಲವಾಗಲಿದೆ. ಕೊಪ್ಪಳ, ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಅಲ್ಲದೆ ವಿಜಯಪುರ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಹೃದ್ರೋಗ, ಆಂಕಾಲಜಿ, ಟ್ರಾಮಾ ಕೇರ್ ಘಟಕಗಳನ್ನು ಒಳಗೊಂಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಲಾಗುತ್ತಿದೆ. ಈ ಯೋಜನೆಯಿಂದ ಜನರಿಗೆ ಸಮೀಪದಲ್ಲಿಯೇ ಅತ್ಯುತ್ತಮ ಚಿಕಿತ್ಸೆ ದೊರೆಯಲಿದೆ ಎಂದು ಅವರು ಹೇಳಿದರು.

ರಾಜ್ಯದ 156 ತಾಲೂಕುಗಳಲ್ಲಿ ಬರ ಪರಿಸ್ಥಿತಿಯಿದ್ದು, ಕುಡಿಯುವ ನೀರು ಮತ್ತು ಜಾನುವಾರಗಳ ಮೇವಿಗೆ ಕೊರತೆಯಾಗದಂತೆ ಕ್ರಮಕೈಗೊಳ್ಳಲಾಗಿದೆ. ಕೃಷಿಯನ್ನು ಲಾಭದಾಯಕವಾಗಿಸಲು ಸರ್ಕಾರ ಪ್ರಯತ್ನಿಸುತ್ತಿದ್ದು, ಇದಕ್ಕಾಗಿ 8 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಇಸ್ರೇಲ್ ಮಾದರಿ ಕೃಷಿ ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಲಾಗಿದೆ. ಇವುಗಳಲ್ಲಿ ಐದು ಜಿಲ್ಲೆಗಳು ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ ಭಾಗದವುಗಳಾಗಿವೆ ಎಂದು ಕುಮಾರಸ್ವಾಮಿ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಮಾತನಾಡಿ, ಕನ್ನಡ ಭಾಷೆ, ಸಾಹಿತ್ಯ ಪರಂಪರೆ ಹಿರಿಮೆ ಉಳ್ಳದ್ದಾಗಿದೆ. ವಿಶ್ವ ಭೂಪಟದಲ್ಲಿ ಕನ್ನಡಕ್ಕೆ ದೊಡ್ಡ ಹೆಸರಿದೆ. ಇಂತಹ ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಮತ್ತು ಕನ್ನಡ ಸಾಹಿತ್ಯ ಪರಿಷತ್ ಕೆಲಸ ಮಾಡುತ್ತಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News