×
Ad

ಅಭ್ಯರ್ಥಿಗಳನ್ನು ಗೆಲ್ಲಿಸಲು ಮುಂಚೂಣಿ ಘಟಕಗಳ ಜವಾಬ್ದಾರಿ ಹೆಚ್ಚಿದೆ: ಈಶ್ವರ್ ಖಂಡ್ರೆ

Update: 2019-01-05 19:11 IST

ಬೆಂಗಳೂರು, ಜ.5: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಮುಂಚೂಣಿ ಘಟಕಗಳ ಜವಾಬ್ದಾರಿ ಹೆಚ್ಚಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದರು.

ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಕಿಸಾನ್ ಘಟಕ, ಮಹಿಳಾ ಘಟಕ, ಹಿಂದುಳಿದ ವರ್ಗಗಳ ಘಟಕ, ಅಲ್ಪಸಂಖ್ಯಾತರ ಘಟಕ, ಕಾರ್ಮಿಕ ಘಟಕ, ಯುವ ಘಟಕ, ಎಸ್ಸಿ-ಎಸ್ಟಿ ಘಟಕ ಸೇರಿದಂತೆ ಹಲವು ಮುಂಚೂಣಿ ಘಟಕಗಳ ಅಧ್ಯಕ್ಷರ ಜತೆ ಸಭೆ ನಡೆಸಿ ಅವರು ಮಾತನಾಡಿದರು.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲೇಬೇಕು. ಪಕ್ಷ ಅಧಿಕಾರಕ್ಕೆ ಬಂದು, ರಾಹುಲ್ ಗಾಂಧಿ ಪ್ರಧಾನಿಯಾಗಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾರ್ಯಕರ್ತ, ಕಾಂಗ್ರೆಸ್ ಪಕ್ಷದ ವಿಚಾರಧಾರೆಗಳನ್ನು ಜನರಿಗೆ ಮುಟ್ಟಿಸಬೇಕು ಎಂದರು.

ರಾಜ್ಯದಲ್ಲಿ ಸದ್ಯದಲ್ಲಿ ಬರ ಪರಿಸ್ಥಿತಿ ಇದೆ. ಇದನ್ನು ಸಮರ್ಥವಾಗಿ ಎದುರಿಸಬೇಕು. ಕುಡಿಯುವ ನೀರಿನ ಸಮಸ್ಯೆ ಅತ್ಯಂತ ಗಂಭೀರ ಸ್ವರೂಪದ್ದಾಗಿದ್ದು, ಜನ ಇದರಿಂದಾಗಿಯೇ ಹೆಚ್ಚು ಸಂತ್ರಸ್ತರಾಗುತ್ತಾರೆ. ಇದಕ್ಕೆ ಅವಕಾಶ ನೀಡದಂತೆ ಪಕ್ಷದ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಹೇಳಿದರು.

ಬರ ಪರಿಹಾರ ಕಾಮಗಾರಿಗಳ ಬಗ್ಗೆ ನಿಗಾವಹಿಸಬೇಕು. ಕುಡಿಯುವ ನೀರಿನ ಸಮಸ್ಯೆ ಪೀಡಿತ ಪ್ರದೇಶಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಮುಖಂಡರ ಜತೆ ಚರ್ಚೆ ಮಾಡಬೇಕು. ಅಧಿಕಾರಿಗಳ ಗಮನ ಸೆಳೆಯಬೇಕು, ಬರ ಪರಿಸ್ಥಿತಿಯಲ್ಲಿ ಜನರ ನಡುವೆ ಇದ್ದು ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು. ಸಭೆಯಲ್ಲಿ ಹಿಂದುಳಿದ ವರ್ಗಗಳ ಅಧ್ಯಕ್ಷ ಲಕ್ಷ್ಮೀನಾರಾಯಣ, ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾಅಮರನಾಥ್, ಕಾರ್ಮಿಕ ಘಟಕದ ಎಸ್.ಎಸ್. ಪ್ರಕಾಶಂ ಸೇರಿದಂತೆ ಪ್ರಮುಖರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News