ಮಕ್ಕಳ ಭವಿಷ್ಯ ಉತ್ತಮವಾಗಿಸಲು ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ಡಾ.ಜಿ.ಪರಮೇಶ್ವರ್

Update: 2019-01-05 17:03 GMT

ತುಮಕೂರು, ಜ.5: ಮಕ್ಕಳಲ್ಲಿ ಉತ್ತಮ ಭವಿಷ್ಯವನ್ನು ನಿರ್ಮಾಣ ಮಾಡುವುದರಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಶ್ರಮ ಮತ್ತು ಸೇವೆ ಅನನ್ಯವಾದದ್ದು ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಶ್ಲಾಘಿಸಿದ್ದಾರೆ.

ನಗರದ ಬಾಲಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಬಾಲಭವನ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಮಕ್ಕಳ ದಿನಾಚರಣೆ, 111 ಅಂಗನವಾಡಿ ಕಟ್ಟಡಗಳ ಉದ್ಘಾಟನೆ ಹಾಗೂ ಬಾಲಭವನ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡುತ್ತಿದ್ದ ಅವರು, ದೇಶದ ಉಜ್ವಲ ಭವಿಷ್ಯ ರೂಪಿಸುವ ಮಕ್ಕಳ ಅಭಿವೃದ್ಧಿಗೆ ಸರಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ದೇಶವು ವೇಗವಾಗಿ ಬೆಳೆಯುತ್ತಿದ್ದು, 40 ವರ್ಷದೊಳಗಿನ ಯುವ ಸಮುದಾಯ ನವಭಾರತವನ್ನು ಸೃಷ್ಟಿಸಿದ್ದಾರೆ. ಇಂದಿನ ಮಕ್ಕಳೇ ಮುಂದಿನ ದೇಶದ ಭವಿಷ್ಯವನ್ನು ರೂಪಿಸುವಂತವರು. ಹೀಗಾಗಿ ಅಂಗನವಾಡಿ ವ್ಯವಸ್ಥೆ ಅತಿ ಮುಖ್ಯವಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ ನಿರ್ಮಿಸಿರುವ 111 ಅಂಗನವಾಡಿ ಕಟ್ಟಡಗಳ ಕೀಲಿಕೈಗಳನ್ನು ಸಾಂಕೇತಿಕವಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ವಿತರಿಸಿದರು.
ಸಭೆಯಲ್ಲಿ ಸಂಸದ ಎಸ್.ಪಿ.ಮುದ್ದಹನುಮೇಗೌಡ, ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್, ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಜಿಲ್ಲಾ ಪಂಚಾಯತ್ ಸಿಇಓ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ದಿವ್ಯಾ ವಿ.ಗೋಪಿನಾಥ್, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ನಟರಾಜು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್ ಮತ್ತಿತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News