ಸಿಎಂ ನಿಗಮ-ಮಂಡಳಿ ಅಧ್ಯಕ್ಷರ ನೇಮಕಾತಿ ತಡೆ ಹಿಡಿದಿಲ್ಲ, ವಿವರ ಕೇಳಿದ್ದಾರೆ: ಪರಮೇಶ್ವರ್ ಸ್ಪಷ್ಟನೆ

Update: 2019-01-07 13:53 GMT

ಬೆಂಗಳೂರು, ಜ.7: ಮುಖ್ಯಮಂತ್ರಿ ಕುಮಾರಸ್ವಾಮಿಯವರು ಆಯ್ದ ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ತಡೆ ಹಿಡಿದಿಲ್ಲ. ಬದಲಿಗೆ ಅವರು ಆ ನಿಗಮ ಮಂಡಳಿಗಳ ನೇಮಕ ಕುರಿತಂತೆ ಕೆಲ ವಿವರಗಳನ್ನು ಕೇಳಿದ್ದಾರೆ ಅಷ್ಟೇ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.

ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನಿಗಮ ಮಂಡಳಿ ಅಧ್ಯಕ್ಷರ ನೇಮಕ ಸಂಬಂಧ ಶೀಘ್ರದಲ್ಲೆ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು. ಕೆಲ ನಿಗಮ ಮಂಡಳಿಗಳ ಅಧ್ಯಕ್ಷರ ಆಯ್ಕೆ ಪತ್ರಕ್ಕೆ ಸಿಎಂ ಸಹಿ ಹಾಕಿಲ್ಲ. ವಿವರಗಳನ್ನು ಕೇಳಿದ್ದಾರೆ. ಅವರೊಂದಿಗೆ ಮಾತುಕತೆ ನಡೆಸಿ ಈ ಸಮಸ್ಯೆ ಪರಿಹರಿಸಲಾಗುವುದು ಎಂದರು.

ಕೆಲ ನಿಗಮ ಮಂಡಳಿಗಳ ಅಧ್ಯಕ್ಷರ ಆಯ್ಕೆಯನ್ನು ಸಿಎಂ ತಡೆಹಿಡಿದಿರುವುದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಅವಮಾನ ಮಾಡಿದಂತೆ ಎಂದು ಶಾಸಕ ಕೆ.ಸುಧಾಕರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಇದು ಅವಮಾನವೆಂದು ಭಾವಿಸಬೇಕಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಎಲ್ಲರೂ ಸೇರಿ ಚರ್ಚೆ ನಡೆಸಿಯೇ ನಿರ್ಧಾರ ಕೈಗೊಳ್ಳಲಾಗಿದೆ. ಎಸ್.ಟಿ.ಸೋಮಶೇಖರ್ ಬೆಂಬಲಿಗರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News