×
Ad

ಬರ ನಿರ್ವಹಣೆ ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ: ಸಚಿವ ಕೃಷ್ಣಭೈರೇಗೌಡ

Update: 2019-01-08 20:45 IST

ಬೆಂಗಳೂರು, ಜ. 8: ರಾಜ್ಯದಲ್ಲಿನ ಬರ ಪರಿಸ್ಥಿತಿ ನಿರ್ವಹಣೆಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಅಗತ್ಯ ಕ್ರಮ ಕೈಗೊಂಡಿದ್ದು, ಬರ ನಿರ್ವಹಣೆಗೆ ನಿರ್ಲಕ್ಷ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ನಗರದ ಬಹುಮಹಡಿ ಕಟ್ಟಡದಲ್ಲಿ ರಾಜ್ಯದ ಎಲ್ಲ್ಲ ಜಿಲ್ಲೆಗಳ ಕಾರ್ಯ ನಿರ್ವಾಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫ್‌ರೆನ್ಸ್ ನಡೆಸಿದ ಅವರು, ಈಗಾಗಲೇ 162 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿದ್ದು, ಅಗತ್ಯ ಅನುದಾನ ಒದಗಿಸಲಾಗಿದೆ. ಆ ಹಣವನ್ನು ಬಳಸಿಕೊಂಡು ಬರ ಪೀಡಿತ ಪ್ರದೇಶದ ಜನರಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು-ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಬರ ನಿರ್ವಹಣೆ ಕಾಮಗಾರಿಗಳು ಅತ್ಯಂತ ಚುರುಕಾಗಿ ನಡೆಯಬೇಕಿತ್ತು. ಆದರೆ ಇದರ ಪ್ರಗತಿ ಸಮಾಧಾನಕರವಾಗಿಲ್ಲ. 5ಲಕ್ಷ ರೂ.ಒಳಗಿನ ಕಾಮಗಾರಿಗಳಿಗೆ ಜ.10ರೊಳಗೆ ಕಾರ್ಯಾದೇಶ ನೀಡಬೇಕೆಂದು ಸೂಚಿಸಲಾಗಿತ್ತು. ಆದರೆ, ಕೆಲ ಜಿಲ್ಲೆಗಳಲ್ಲಿ ಇನ್ನೂ ಪೂರ್ಣಪ್ರಮಾಣದಲ್ಲಿ ಕಾರ್ಯಾದೇಶ ನೀಡಲಾಗಿಲ್ಲ. ಇಂತಹ ಕಾರ್ಯಪಾಲಕ ಅಭಿಯಂತರರು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಅನಿವಾರ್ಯ ಎಂದು ಹೇಳಿದರು. 

ಕುಡಿಯುವ ನೀರಿನ ಸಮಸ್ಯೆ ಇರುವ ಕಡೆ ಟ್ಯಾಂಕರ್ ಮೂಲಕ ನೀರು ಪೂರೈಸುವುದು, ಹೊಸದಾಗಿ ಕೊಳವೆ ಬಾವಿ ಕೊರೆಸುವುದು ಹಾಗೂ ಪಂಪ್ ಮತ್ತು ಪೈಪ್‌ಲೈನ್ ಅಳವಡಿಕೆ ಮುಂತಾದ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೆತ್ತಿಕೊಳ್ಳಬೇಕು.

ಇಂತಹ ಕೆಲಸಗಳಲ್ಲಿ ನಿರ್ಲಕ್ಷ್ಯ ತೋರಿದರೆ ಯಾವ ಕಾರಣಕ್ಕೂ ಸಹಿಸಲಾಗದು. ಇವುಗಳಿಗೆ ನೇರವಾಗಿ ಜಿಲ್ಲೆಯ ಜಿ.ಪಂ.ಮುಖ್ಯ ಕಾರ್ಯನಿರ್ವಾಣಾಧಿಕಾರಿಗಳನ್ನೇ ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಕೃಷ್ಣಭೈರೇಗೌಡ ಇದೇ ವೇಳೆ ನಿರ್ದೇಶನ ನೀಡಿದರು. ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತಿಕ್ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತ ಕೆ. ವಿಶಾಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News