ಭಾರತ ಬಂದ್: ಭಾಗಶಃ ಯಶಸ್ವಿ

Update: 2019-01-08 18:24 GMT

ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೂತನ ಮೋಟಾರ್ ವಾಹನ ತಿದ್ದುಪಡಿ ಮಸೂದೆ ಹಿಂಪಡೆಯುವುದು ಸೇರಿದಂತೆ ಕಾರ್ಮಿಕ ವಿರೋಧಿ ಕಾನೂನು ಸುಧಾರಣೆಯನ್ನು ಖಂಡಿಸಿ ಕಾರ್ಮಿಕ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರ ಭಾಗಶಃ ಯಶಸ್ವಿಯಾಗಿದೆ. ರಾಜಧಾನಿ ಬೆಂಗಳೂರು, ಮೈಸೂರು, ಕಲಬುರಗಿ, ಬೆಳಗಾವಿ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿ ಸಾರಿಗೆ ವಾಹನಗಳು, ರಿಕ್ಷಾ, ಟ್ಯಾಕ್ಸಿ ಸೇರಿದಂತೆ ಯಾವುದೇ ವಾಹನಗಳು ರಸ್ತೆಗೆ ಇಳಿಯಲಿಲ್ಲ. ಹೀಗಾಗಿ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ತೆರಳಬೇಕಿದ್ದ ಸಾರ್ವಜನಿಕ ಪ್ರಯಾಣಿಕರು ಅಕ್ಷರಶಃ ಪರದಾಡಬೇಕಾಯಿತು. ಸಾರ್ವತ್ರಿಕ ಸಾರಿಗೆ ವಾಹನಗಳು ರಸ್ತೆಗೆ ಇಳಿಯದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ರಸ್ತೆಗಳು ಖಾಲಿ ಖಾಲಿಯಾಗಿದ್ದವು. ಸದಾ ಜನರಿಂದ ಗಿಜಿಗುಡುತ್ತಿದ್ದ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ(ಮೆಜೆಸ್ಟಿಕ್) ಸೇರಿದಂತೆ ರಾಜ್ಯದ ಎಲ್ಲ ಬಸ್ ನಿಲ್ದಾಣಗಳು ಜನರಿಲ್ಲದೆ ಬಣಗುಡುತ್ತಿದ್ದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor