ತೆಂಗಿನ ನಾರಿನ ಉದ್ದಿಮೆ: ಕನಿಷ್ಠ 1 ಲಕ್ಷ ಉದ್ಯೋಗ ಸೃಷ್ಟಿಗೆ ಕ್ರಮ ವಹಿಸಲು ಮುಖ್ಯಮಂತ್ರಿ ಸೂಚನೆ

Update: 2019-01-09 14:38 GMT

ಬೆಂಗಳೂರು, ಜ. 9: ತೆಂಗಿನ ನಾರಿನ ಉದ್ದಿಮೆ ಸ್ಥಾಪನೆಗೆ ರಾಜ್ಯದಲ್ಲಿ ವಿಫುಲ ಅವಕಾಶವಿದ್ದು, ಮುಂದಿನ ದಿನಗಳಲ್ಲಿ ಕನಿಷ್ಠ 1ಲಕ್ಷ ಉದ್ಯೋಗ ಸೃಷ್ಟಿಗೆ ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ, ರಾಜ್ಯ ತೆಂಗಿನ ನಾರು ಅಭಿವೃದ್ಧಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬುಧವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ತೆಂಗಿನ ನಾರಿನ ಉದ್ಯಮಗಳ ಪುನಶ್ಚೇತನ ಕುರಿತಂತೆ ತನ್ನ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದ ಅವರು, ದೇಶದಲ್ಲಿ ತೆಂಗು ಉತ್ಪಾದನೆಯಲ್ಲಿ ರಾಜ್ಯ ಶೇ.29ರಷ್ಟು ಉತ್ಪಾದನೆಯೊಂದಿಗೆ ಎರಡನೆ ಸ್ಥಾನದಲ್ಲಿದೆ. ಆದರೆ, ತೆಂಗಿನ ನಾರಿನ ಉತ್ಪನ್ನಗಳಲ್ಲಿ ರಾಜ್ಯದ ಪಾಲು ಶೇ.10ರಷ್ಟು ಮಾತ್ರ. ರಾಜ್ಯದಲ್ಲಿ ಗುಣಮಟ್ಟದ ತೆಂಗಿನನಾರು ಹೇರಳವಾಗಿ ಲಭ್ಯವಿರುವುದರಿಂದ ತೆಂಗಿನ ನಾರಿನ ಉದ್ಯಮಗಳ ಸ್ಥಾಪನೆಗೆ ಉತ್ತೇಜನ ನೀಡಲು ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸೂಚಿಸಿದರು. ತೆಂಗಿನ ನಾರಿನ ಉತ್ಪನ್ನಗಳ ತಯಾರಿಕಾ ಘಟಕಗಳ ಸ್ಥಾಪನೆಗೆ ಪೂರಕ ವಾತಾವರಣ, ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಒತ್ತು ನೀಡಬೇಕೆಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಸಣ್ಣ ಕೈಗಾರಿಕಾ ಸಚಿವ ಶ್ರೀನಿವಾಸ್, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ನಿಗಮದ ಅಧಿಕಾರಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News