ಮೀಸಲಾತಿ ಮಸೂದೆ ಮಂಡನೆ ಬಿಜೆಪಿಯ ಚುನಾವಣಾ ಗಿಮಿಕ್: ಮಾಜಿ ಸಿಎಂ ಸಿದ್ದರಾಮಯ್ಯ

Update: 2019-01-09 15:16 GMT

ಮೈಸೂರು,ಜ.9: ನಿಗಮ ಮಂಡಳಿ ನೇಮಕಾತಿಗೆ ಸಂಬಂಧಿಸಿದಂತೆ ಹಾದಿ ಬೀದಿಯಲ್ಲಿ ಚರ್ಚಿಸಲು ಸಾಧ್ಯವಿಲ್ಲ. ಈ ಸಂಬಂಧ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಖಾಸಗಿ ಕಾರ್ಯನಿಮಿತ್ತ ಬುಧವಾರ ಮೈಸೂರಿಗೆ ಆಗಮಿಸಿದ ಅವರು, ತಮ್ಮ ರಾಮಕೃಷ್ಣ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ನಿಗಮ ಮಂಡಳಿ ನೇಮಕಾತಿ ಬಗ್ಗೆ ಸಚಿವ ಎಚ್.ಡಿ ರೇವಣ್ಣ ಅಸಮಾಧಾನ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಈ ವಿಚಾರವನ್ನು ಹಾದಿ ಬೀದಿಯಲ್ಲಿ ಮಾತನಾಡುವುದಿಲ್ಲ. ಶೀಘ್ರದಲ್ಲಿಯೇ ಸಮನ್ವಯ ಸಮಿತಿ ಸಭೆ ಕರೆಯುತ್ತೇನೆ. ಅಲ್ಲಿ ಈ ವಿಚಾರವನ್ನು ಚರ್ಚೆ ಮಾಡುತ್ತೇವೆ ಎಂದು ಹೇಳಿದರು.

ಮುಂಬರುವ ಲೋಕಸಭಾ ಚುನಾವಣೆಯ ಸೀಟು ಹಂಚಿಕೆ ಕುರಿತು ಸಮನ್ವಯ ಸಮತಿ ಸಭೆಯಲ್ಲೇ ಮಾತುಕತೆ ನಡೆಸಲಾಗುತ್ತದೆ ಎಂದು ಹೇಳಿದರು.

ಚುನಾವಣಾ ಗಿಮಿಕ್
ಮೇಲ್ವರ್ಗದವರಿಗೆ ಶೇಕಡಾ 10ರಷ್ಟು ಮೀಸಲಾತಿ ನೀಡಬೇಕೆಂಬ ಮಸೂದೆ ಮಂಡನೆ ಮಾಡಿರುವುದು ಬಿಜೆಪಿಯ ಚುನಾವಣಾ ಗಿಮಿಕ್ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಮೇಲ್ವರ್ಗದ ಬಡವರಿಗೆ ಮೀಸಲಾತಿ ನೀಡಬೇಕೆನ್ನುವುದು ಸ್ವಾಗತಾರ್ಹ. ಮೀಸಲಾತಿಯನ್ನು ವಿರೋಧಿಸುತ್ತಿದ್ದವರೇ ಬಿಜೆಪಿಯವರು. ಆದರೀಗ ಅವರೇ ಮೀಸಲಾತಿ ಕುರಿತು ಮಸೂದೆ ಮಂಡನೆಗೆ ಮುಂದಾಗಿರುವುದು ಕೇವಲ ಚುನಾವಣಾ ಗಿಮಿಕ್ ಎಂದರು.

ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಮುಷ್ಕರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳನ್ನು ಹೊರತು ಪಡಿಸಿ ಉಳಿದ ಕಾರ್ಮಿಕ ಸಂಘಟನೆಗಳೆಲ್ಲಾ ಭಾಗಿಯಾಗಿವೆ. ಕಾರ್ಮಿಕರ ಮುಷ್ಕರ ನ್ಯಾಯಯುತವಾಗಿದೆ. ಕಾರ್ಮಿಕರ ಮುಷ್ಕರ ಕಾಂಗ್ರೆಸ್ ಪ್ರೇರಿತವಲ್ಲ. ಕಾರ್ಮಿಕರ ಸಮಸ್ಯೆಗಳನ್ನು ನಿವಾರಿಸಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಹೇಳಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News