ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಚೆ ನೌಕರರ ಪ್ರತಿಭಟನೆ

Update: 2019-01-09 16:24 GMT

ಬೆಂಗಳೂರು, ಜ.9: ಏಳನೆ ವೇತನ ಆಯೋಗ ತಾರತಮ್ಯ ಸರಿಪಡಿಸಿ, ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಅಂಚೆ ನೌಕರರ ಸಂಘದ ನೌಕರರು ಪ್ರತಿಭಟನೆ ನಡೆಸಿದರು.

ಬುಧವಾರ ಬೆಳಗ್ಗೆ ಅಂಚೆ ನೌಕರರು ಕೇಂದ್ರ ಕಚೇರಿ ಮುಂಭಾಗ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ ಅಂಚೆ ನೌಕರರು, ಗ್ರಾಮೀಣ ಭಾಗಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅಂಚೆ ನೌಕರರನ್ನು ಖಾಯಂಗೊಳಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ, ಏಳನೆ ವೇತನ ಆಯೋಗದ ತಾರತಮ್ಯ, ನೂತನ ಪಿಂಚಣಿ ಹಾಗೂ ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಿದರು.

ಕೇಂದ್ರ ಸರಕಾರ ಹಲವಾರು ವರ್ಷಗಳಿಂದ ಅಂಚೆ ನೌಕರರ ಬೇಡಿಕೆಗಳನ್ನು ಈಡೇರಿಸದೆ ನಿರ್ಲಕ್ಷ ವಹಿಸಿದೆ. 2004ರಿಂದ ಪಿಂಚಣಿ ಸೌಲಭ್ಯ ಸ್ಥಗಿತಗೊಳಿಸಲಾಗಿದೆ. ಹಲವು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಭಡ್ತಿ ನೀಡದೆ, ಅನ್ಯಾಯ ಮಾಡುತ್ತಿದೆ. ಇದರಿಂದ ಅಂಚೆ ನೌಕರರ ಜೀವನ ಕಷ್ಟಕ್ಕೆ ಸಿಲುಕಿದೆ. ಕೂಡಲೆ ಕೇಂದ್ರ ಸರಕಾರ ಎಲ್ಲ ಅಂಚೆ ನೌಕರರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಅಂಚೆ ನೌಕರರ ಸಂಘಟನಾ ಕಾರ್ಯದರ್ಶಿ ಗಣೇಶ್, ಸುಬ್ರಹ್ಮಣ್ಯ, ಚಂದ್ರು ಸೇರಿದಂತೆ ನೂರಕ್ಕೆ ಹೆಚ್ಚು ಮಂದಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News